ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಪಿರಿಯಾಪಟ್ಟಣ: ಭೂಮಿ ನಮ್ಮ ಆಸ್ತಿ ಅಲ್ಲ. ನಾವು ಭೂಮಿಯ ಆಸ್ತಿ ಆಗಬೇಕು ಆ ಮೂಲಕ ಪರಿಸರ ಸಂರಕ್ಷಿಸಲು ಟೊಂಕ ಕಟ್ಟಿ ನಿಲ್ಲಬೇಕು ಎಂದು ಬೆಟ್ಟದಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸಿ.ಎಲ್.ಸೋಮಶೇಖರ್ ತಿಳಿಸಿದರು.
ತಾಲೂಕಿನ ಬೆಟ್ಟದಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ಮನುಷ್ಯನ ಸಂಗಾತಿ, ಅವನು ಉತ್ತಮ ಆರೋಗ್ಯವಂತರಾಗಿ ಜೀವಿಸಬೇಕಾದರೆ ಅವನ ಸುತ್ತಲಿನ ಪರಿಸರ ಉತ್ತಮವಾಗಿರಬೇಕು ಆದ್ದರಿಂದ ಗಿಡ – ಮರಗಳನ್ನು ಬೆಳೆಸುವುದು ಕೇವಲ ಅರಣ್ಯ ಇಲಾಖೆ ಕೆಲಸ ಎಂದು ಭಾವಿಸದೆ ನಾವುಗಳು ನಮ್ಮ ಸುತ್ತಮುತ್ತಲಿನಲ್ಲಿ ಒಳ್ಳೆಯ ಗಿಡಮರಗಳನ್ನು ಬೆಳೆಸಲು ಮುಂದಾಗಬೇಕು, ಉತ್ತಮ ಪರಿಸರವಿದ್ದರೆ ಪ್ರಾಕೃತಿಕ ಅಸಮತೋಲನವನ್ನು ತಪ್ಪಿಸಲು ಸಾಧ್ಯ. ಪರಿಸರವನ್ನು ನಾವು ಸಂರಕ್ಷಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಗಿಡ -ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮಾಡಬೇಕು ಎಂದರು.
ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಮಾತನಾಡಿ ವನ ಮಹೋತ್ಸವ ಜುಲೈ ತಿಂಗಳಿಗೆ ಮಾತ್ರ ಸೀಮಿತವಾಗದೆ ಅದು ಬದುಕಿನ ನಿತ್ಯೋತ್ಸವ ವಾಗಬೇಕು. ಸರ್ಕಾರ ಪರಿಸರ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಎಂಬ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ ಆಗಿದ್ದು ಪ್ರಾಕೃತಿಕ ಸಮತೋಲನದಿಂದ ಮಾತ್ರ ಸುಖ- ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.