ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಅರ್ಹತೆ ಪರಿಶೀಲನೆ ಮಾಡುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಲ್ಲಿ ಮಾತ್ರ ಸುಮಾರು ₹100 ಕೋಟಿ ದುರ್ಬಳಕೆಯಾಗಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದ್ದು, ಗ್ಯಾರಂಟಿ ಯೋಜನೆಗಳ ಸೌಲಭ್ಯ ನಿಜವಾದ ಅರ್ಹರಿಗೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಫಲಾನುಭವಿಗಳ ದಾಖಲೆಗಳನ್ನು ಮರುಪರಿಶೀಲನೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸುವ ಪ್ರಸ್ತಾವನೆಯೂ ಇದೆ ಎಂದು ತಿಳಿಸಿದರು.
ಕೆಲವು ಪ್ರಕರಣಗಳಲ್ಲಿ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಹೆಸರಿನಲ್ಲೇ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಅಲ್ಲದೆ, ನೋಂದಾಯಿತ ಮೊಬೈಲ್ ಸಂಖ್ಯೆಗಳ ದುರ್ಬಳಕೆಯಿಂದ ಅನರ್ಹರು ಹಣ ಪಡೆಯುತ್ತಿರುವ ಶಂಕೆಯೂ ವ್ಯಕ್ತವಾಗಿದೆ ಎಂದು ಹೇಳಿದರು.
ಇನ್ನು ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಮಾರು ₹100 ಕೋಟಿ ತಪ್ಪು ವ್ಯಕ್ತಿಗಳ ಕೈ ಸೇರಿದೆ. ಕೆಲವರು ತಮ್ಮ ಮೊಬೈಲ್ ಸಂಖ್ಯೆಯ ಬದಲು ಇತರರ ಸಂಖ್ಯೆಯನ್ನು ನೀಡಿರುವುದು ಕೂಡ ಬೆಳಕಿಗೆ ಬಂದಿದ್ದು, ಹೀಗಾಗಿ ಯೋಜನೆಗಳ ಲಾಭ ಸರಿಯಾದ ವ್ಯಕ್ತಿಗಳಿಗೆ ತಲುಪುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.
ಈ ಬಗ್ಗೆ ಪ್ರತಿ ತಾಲೂಕು ಮಟ್ಟದಲ್ಲೂ ಈ ಕುರಿತು ವಿಮರ್ಶೆ ನಡೆಯುತ್ತಿದ್ದು, ಯೋಜನೆಗಳ ದುರ್ಬಳಕೆ ತಡೆದು ನಿಜವಾದ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಇದೇ ವೇಳೆ, ಕಳೆದ ಎರಡು ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಸ್ಥಗಿತವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಗತ್ಯ ಪ್ರಮಾಣದಲ್ಲಿ ಅಕ್ಕಿ ಪೂರೈಕೆ ಮಾಡದ ಕೇಂದ್ರ ಸರ್ಕಾರವೇ ಇದಕ್ಕೆ ಕಾರಣ ಎಂದು ಆರೋಪಿಸಿದರು.



