ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಇನ್ನೇನು ಆರಂಭವಾಗಲಿದ್ದು, ಮನೆಮಂದಿ ಪಟಾಕಿ ಸಿಡಿಸಿ ಖುಷಿ ಪಡುವ ಸಮಯ ಇದು. ಆದರೆ, ಪರಿಸರದ ರಕ್ಷಣೆಯ ದೃಷ್ಟಿಯಿಂದ ಈ ಬಾರಿ ದೀಪಾವಳಿ ಹಬ್ಬಕ್ಕೆ ಸರ್ಕಾರದಿಂದ ಕಠಿಣ ಮಾರ್ಗಸೂಚಿಗಳು ಹೊರಡಿಸಲ್ಪಟ್ಟಿವೆ.
ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ, ಹಸಿರು ಪಟಾಕಿಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಪಟಾಕಿ ಸಿಡಿಸುವ ಅವಧಿಯನ್ನೂ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಆದೇಶಿಸಿದ ಅವರು ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷಿದ್ಧ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಹಸಿರು ಪಟಾಕಿಗೆ ಮಾತ್ರ ಅವಕಾಶ
ಈ ಬಾರಿ ಕೂಡ ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದು, ವಾಯುಮಾಲಿನ್ಯ ಸಮಸ್ಯೆ ಕಾರಣ ಹಾನಿಕಾರಕ ಪಟಾಕಿಗಳ ಬಳಸದಂತೆ ಕಟ್ಟುನಿಟ್ಟಾಗಿ ಆದೇಶಿಸಿದೆ. ಈ ಅಭಿಯಾನಕ್ಕೆ ಅನೇಕ ಸಂಘಟನೆಗಳು ಸಹ ಕೈಜೋಡಿಸಿವೆ.
ಹಾಗಾದರೆ ಏನಿದು ಹಸಿರು ಪಟಾಕಿ? ಮಾರುಕಟ್ಟೆಗಳಲ್ಲಿ ಅತ್ಯಾಕರ್ಷಕ ಪ್ಯಾಕೆಟ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪರಿಸರಕ್ಕೆ ಹಾನಿಕಾರವಾದ ಪಟಾಕಿಗಳ ನಡುವೆ ಹಸಿರು ಪಟಾಕಿಗಳನ್ನು ಗುರುತಿಸಿ ಖರೀದಿಸುವುದಾದರೂ ಹೇಗೆ? ಇಲ್ಲಿದೆ ಮಾಹಿತಿ……
ಒಂದರ್ಥದಲ್ಲಿ ಹೇಳುವುದಾದರೆ, ಹಸಿರು ಪಟಾಕಿ ಹಾಗೂ ಸಾಮಾನ್ಯ ಪಟಾಕಿ ಎರಡು ಕೂಡ ಮಾಲಿನ್ಯ ಉಂಟು ಮಾಡುತ್ತವೆ. ಆದರೆ ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಶೇಕಡಾ 30 ರಷ್ಟು ಕಡಿಮೆ ವಾಯು ಮಾಲಿನ್ಯಕಾರಕವನ್ನು ಹೊರಸೂಸುತ್ತದೆ. ಹಸಿರು ಪಟಾಕಿಗಳು ಮಾಲಿನ್ಯಕಾರಕ ಹೊಗೆ ಹೊರಸೂಸುವುದನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ, ಧೂಳನ್ನು ಹೀರಿಕೊಳ್ಳುತ್ತದೆ.
ಅಲ್ಲದೇ ಬೇರಿಯಮ್ ನೈಟ್ರೇಟ್‌ನಂತಹ ಅಪಾಯಕಾರಿ ಅಂಶಗಳನ್ನು ಹೊಂದಿರುವುದಿಲ್ಲ. ಸಾಮಾನ್ಯ ಪಟಾಕಿಗಳಲ್ಲಿನ ವಿಷಕಾರಿ ಲೋಹಗಳನ್ನು ಕಡಿಮೆ ಅಪಾಯಕಾರಿ ಸಂಯುಕ್ತಗಳೊಂದಿಗೆ ಬದಲಾಯಿಸಲಾಗುತ್ತದೆ. ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ದ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರಕಾರ, ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಳಪೆಯಾಗಿರುವ ನಗರಗಳು ಮತ್ತು ಪಟ್ಟಣಗಳಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ.
- ಹಸಿರು ಪಟಾಕಿ ಎಲ್ಲಿ ಸಿಗುತ್ತೆ? ಗುರುತಿಸುವುದು ಹೇಗೆ?
ಹಸಿರು ಪಟಾಕಿಗಳ ಉತ್ಪಾದನೆಗೆ ಸಂಬಂಧಿಸಿದಂತೆ ಸರ್ಕಾರ ದೇಶದ 230 ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹಸಿರು ಪಟಾಕಿಗಳ ಲಭ್ಯತೆ ಹಾಗೂ ಅವುಗಳನ್ನು ಗುರುತಿಸುವ ಬಗ್ಗೆ ಜನರಲ್ಲಿ ಗೊಂದಲ ಇದೆ. ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಸರ್ಕಾರ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಗಷ್ಟೇ ಮಾರಾಟಕ್ಕೆ ಅನುಮತಿ ನೀಡಿರುತ್ತದೆ.
ಗ್ರಾಹಕರು ತಾವು ಖರೀದಿಸುವ ಪಟಾಕಿಗಳು ಹಸಿರು ಪಟಾಕಿ ಹೌದೆ? ಅಥವಾ ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಲು, ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕು. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ವಿಶಿಷ್ಟ ಹಸಿರು ಲೋಗೋ ಮೂಲಕ ಸಹ ಹಸಿರು ಪಟಾಕಿಗಳನ್ನು ಗುರುತಿಸಬಹುದಾಗಿದೆ. SWAS, SAFAL ಮತ್ತು STAR ಎಂಬ ಮೂರು ವರ್ಗದಲ್ಲಿ ಹಸಿರು ಪಟಾಕಿಗಳು ಸಿಗುತ್ತವೆ. ಇವನ್ನು CSIR ಅಭಿವೃದ್ಧಿಪಡಿಸಿದೆ.
ʼ