ಚಿಕ್ಕೋಡಿ : ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ಪ್ರಸ್ತಾವವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಗಳ ಪುನರ್ರಚನೆ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಚಿಕ್ಕೋಡಿ ಜಿಲ್ಲೆ ರಚನೆ ಕುರಿತ ಬೇಡಿಕೆಯೂ ಪರಿಶೀಲನೆಯಲ್ಲಿದೆ. ಸೂಕ್ತ ಸಮಯದಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಹೇಳಿದರು.
ಇನ್ನೂ ಮಳೆ ಕೊರತೆಯಿಂದ ಚಿಕ್ಕೋಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನೆಲೆ ಜಂಟಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮೀಕ್ಷಾ ವರದಿ ಬಂದ ಬಳಿಕ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಪ್ರಸ್ತುತ ಚಿಕ್ಕೋಡಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವ ಬದ್ಧತೆಯಿದೆ ಎಂದು ಹೇಳಿದರು.
ಇದೇ ವೇಳೆ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲ ದಾಖಲೆಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ಬಳಿಕವೇ ಪ್ರಮಾಣಪತ್ರ ನೀಡಲಾಗುತ್ತಿದ್ದು, ನಕಲಿ ದಾಖಲೆಗಳಿರುವವರ ಬಗ್ಗೆ ಬಿಜೆಪಿ ನಾಯಕರ ಬಳಿ ಯಾವುದೇ ಪುರಾವೆಗಳಿದ್ದರೆ ಸಲ್ಲಿಸಲಿ. ಕಾನೂನು ಚೌಕಟ್ಟನ್ನು ಮೀರಿ ಯಾರಿಗೂ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.



