Friday, April 18, 2025
Google search engine

Homeರಾಜ್ಯಗ್ಯಾರಂಟಿ ಯೋಜನೆ ಜಾಗೃತಿ ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ : ೫ ಕೋಟಿ ಜನರ ಅಭಿಪ್ರಾಯ...

ಗ್ಯಾರಂಟಿ ಯೋಜನೆ ಜಾಗೃತಿ ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ : ೫ ಕೋಟಿ ಜನರ ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮೀಕ್ಷೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಸುಮಾರು ೫ ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ ಮಾಡಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಜೊತೆಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ ೮೪೫೨೩೧೭ ಕುಟುಂಬಗಳ ಸುಮಾರು ೫ ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸೂಚನೆ ನೀಡಿದರು. ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು. ಕಾನೂನು ಪ್ರಕಾರ ಪರಿಶೀಲಿಸಿ ೧೦೦೩ ಅರ್ಹ ಪ್ರಕರಣಗಳಲ್ಲಿ ೯೯೪ ರೈತರ ಕುಟುಂಬಕ್ಕೆ ಪರಿಹಾರ ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಕಳೆದ ಬಾರಿ ಸಭೆಯಲ್ಲಿ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಾರಿ ಚುರುಕು ಮೂಡಿಸಲಾಗಿದೆ. ರೈತರ ಸಭೆ ಮಾಡಿ ಜಾಗೃತಿ, ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ಸಭೆಯಲ್ಲಿ ನಿರ್ದೇಶನ ನೀಡಿದರು.

ಜಮೀನು ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ನೊಂದಣಿ ಅಗುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಬಾಕಿ ರಾಜಸ್ವವನ್ನು ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ೩೦ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇಂತಹ ೨೪೫೧೯ ಪ್ರಕರಣಗಳು ಬಾಕಿಯಿದ್ದು, ೩೧೦ ಕೋಟಿ ರೂ. ರಾಜಸ್ವ ವಸೂಲಾತಿ ಮಾಡಬೇಕಾಗಿದೆ. ಇದನ್ನು ತ್ವರಿತವಾಗಿ ಮಾಡಲು ಸೂಚನೆ ನೀಡಿದರು.

ಮಹಿಳಾ ಆಯೋಗದ ವರದಿ ಬಳಿಕ ಕ್ರಮ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಕಲ್ಬುರ್ಗಿ ಮಹಿಳಾ ಹಾಸ್ಟೆಲ್ ಗೆ ಭೇಟಿ ನೀಡಿ ಹಾಸ್ಟೆಲ್ ಟ್ಯಾಂಕ್ ಮೂಲಕ ಕಲುಷಿತ ನೀರಿನ ಸರಬರಾಜು ಆಗುತ್ತಿರುವ ಬಗ್ಗೆ ಬರೆದಿರುವ ಪತ್ರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆ ಸಮಸ್ಯೆಯನ್ನು ಬಗೆಹರಿಸಿ ಈಗಾಗಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರಿಸಿದರು.

ಶುದ್ಧ ನೀರು ಘಟಕ: ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆಗೆ ಟಾಸ್ಕ್ಫೋರ್ಸ್ ರಚಿಸಲಾಗಿದೆ. ಕಲುಷಿತ ನೀರು ಪರೀಕ್ಷೆಗೆ ಸಾಕಷ್ಟು ಪ್ರಮಾಣದಲ್ಲಿ ಕಿಟ್ ಲಭ್ಯವಿದೆ. ಪ್ರತಿ ಹೋಬಳಿಗೆ ಭೇಟಿ ನೀಡಿ ಪ್ರಮಾಣ ಪತ್ರ ಒದಗಿಸಲು ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಇದುವರೆಗೆ ೪೨೯೪೫ ಜನವಸತಿ ಪ್ರದೇಶಗಳಲ್ಲಿ ಜಂಟಿ ತಪಾಸಣೆ ನಡೆಸಲಾಗಿದೆ.

ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕಗಳ ದುರಸ್ತಿಗೆ ಯೋಜನೆ ರೂಪಿಸಬೇಕು. ಈಗಾಗಲೇ ಅಂತಹ ಶುದ್ಧ ನೀರು ಘಟಕಗಳ ಪರಿಶೀಲನೆ ನಡೆಸಲಾಗಿದ್ದು, ಸಮರ್ಪಕ ಯೋಜನೆ ರೂಪಿಸಿ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

RELATED ARTICLES
- Advertisment -
Google search engine

Most Popular