Saturday, April 19, 2025
Google search engine

Homeರಾಜಕೀಯಗುತ್ತಿಗೆದಾರನ ಮನೆಯಲ್ಲಿ ಕಂತೆ ಕಂತೆ ಹಣ: ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಎಂದ...

ಗುತ್ತಿಗೆದಾರನ ಮನೆಯಲ್ಲಿ ಕಂತೆ ಕಂತೆ ಹಣ: ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ 42 ಕೋಟಿ ರೂಪಾಯಿ ಕಂತೆ ಕಂತೆ ಹಣದ ಮೂಲವನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಎಂದು ಕಾಂಗ್ರೆಸ್ ಪಕ್ಷಕ್ಕೆ ಕಾಲೆಳೆದಿದ್ದಾರೆ.

ಈ ಬಗ್ಗೆ ಖಾರವಾದ ಪ್ರತಿಕ್ರಿಯೆ ನೀಡಿರುವ ಅವರು; ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!! ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಹೇಳಿದ್ದಾರೆ.

ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಈಗ ಹೇಳಿ ಸಿದ್ದರಾಮಯ್ಯನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು.. ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ!! ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ.

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular