Friday, April 4, 2025
Google search engine

Homeರಾಜ್ಯಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಕಿರುಕುಳ: ಜ.25ಕ್ಕೆ ಸಿಎಂ ಸಭೆ

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಕಿರುಕುಳ: ಜ.25ಕ್ಕೆ ಸಿಎಂ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರುತ್ತಿರುವುದರಿಂದ ಕಾಟ ತಾಳಲಾರದೆ ಜನರು ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿದ್ದಾರೆ. ಈ ಸರಣಿ ಆತ್ಮಹತ್ಯೆಗಳ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಜ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.

ಅಲ್ಲದೆ ವಿಪಕ್ಷಗಳೂ ಈ ವಿಷಯದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಕೆಲವೆಡೆ ರೈತ ಮಹಿಳೆಯರು ಸಿಎಂ ಅವರಿಗೆ ಮಾಂಗಲ್ಯ ಸರವನ್ನು ಕಳುಹಿಸಿಕೊಟ್ಟು, ಮೈಕ್ರೋ ಫೈನಾನ್ಸ್‌ ಕಿರುಕುಳ ತಪ್ಪಿಸುವಂತೆ ಮನವಿ ಮಾಡಿದ್ದಾರೆ. ಇದರಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಸಮಸ್ಯೆಗೆ ಪರಿಹಾರ ಸೂತ್ರ ಕಂಡುಕೊಳ್ಳಲು ಮುಂದಾಗಿದ್ದಾರೆ.

ಈ ಬಗ್ಗೆ ಚರ್ಚಿಸಲು ಜ. 25 ( ಶನಿವಾರ) ಬೆಳಗ್ಗೆ 11 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದಾರೆ. ಆವಶ್ಯಕ ಮಾಹಿತಿಯೊಂದಿಗೆ ಸಭೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳಿಗೆ ಸಭೆಯ ಸೂಚನ ಪತ್ರವನ್ನು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ರವಾನಿಸಿದ್ದಾರೆ.

ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಹಕಾರ ಸಚಿವ ಎನ್‌. ರಾಜಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ. ಅಲೋಕ್‌ ಮೋಹನ್‌ ಸಹಿತ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ.

RELATED ARTICLES
- Advertisment -
Google search engine

Most Popular