ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಇಂದು (ಸೋಮವಾರ) 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅನುಭವಿ ರಾಜಕಾರಣಿ ಆಗಿರುವ ಅವರು ಸಕ್ರಿಯವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವರು ಕೊಡುಗೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆರೋಗ್ಯಕರ ಜೀವನ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ‘ನನ್ನ ಪುತ್ರ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ’ ಎಂದು ಹೇಳಿದ್ದಾರೆ.
‘ಜನತೆಯ ಹಿತಕ್ಕಾಗಿ ನಿಮ್ಮ ನಿಸ್ವಾರ್ಥ ಜನಸೇವೆಯನ್ನು ಮುಂದುವರೆಸಿ. ಜನರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ. ಭಗವಂತನ ದಯೆಯಿಂದ ಜನರು ನೀಡುವ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಮಾಡಿಕೊಂಡು ಸಮಾಜಕ್ಕೆ ಅಂಕಿತರಾಗಿ ದುಡಿಮೆ ಮಾಡಿ. ಆರೋಗ್ಯವನ್ನು ಕಾಪಾಡಿಕೊಂಡು ಜನತೆಯ ಆಶೋತ್ತರಳಿಗೆ ಸ್ಪಂದಿಸಿ. ನಿಮಗೆ ಶುಭವಾಗಲಿ’ ಎಂದು ಎಚ್.ಡಿ. ದೇವೇಗೌಡ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಆತ್ಮೀಯರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
ಆತ್ಮೀಯರು, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಇನ್ನೂ ಹೆಚ್ಚಿನ ಜನಸೇವೆ ಮಾಡಲು ದೇವರು ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಕೇಂದ್ರ ಸಚಿವರಾಗಿ ರಾಜ್ಯದ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ದೇಶದ ಅಭಿವೃದ್ಧಿಗಾಗಿ ಪರಿಶ್ರಮಿಸುತ್ತಿರುವ ನಿಮಗೆ ದೇವರು ಉತ್ತಮ ಆಯುರಾರೋಗ್ಯ ಕರುಣಿಸಿ ಸಾರ್ವಜನಿಕ ಜೀವನದಲ್ಲಿ ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ಕರುಣಿಸಲೆಂದು ಹಾರೈಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.