ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ನಿನ್ನೆ ಮೇ೧೩ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಎಚ್.ಡಿ.ರೇವಣ್ಣ ಬಿಡುಗಡೆಯಾಗಿದ್ದಾರೆ.
ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು, ಸುದೀರ್ಘವಾದ ವಾದ ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದರು. ಅಲ್ಲದೆ ಇಬ್ಬರ ಶ್ಯೂರಿಟಿ , ೫ ಲಕ್ಷ ರೂ. ಬಾಂಡ್ ನೀಡಬೇಕು. ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು.