ಬಳ್ಳಾರಿ: ತಾಲೂಕಿನ ರೂಪನಗುಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಗ್ರಾಮೀಣ ಬ್ಯಾಂಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೂಪನಗುಡಿ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರಾ ಅಡಿಯಲ್ಲಿಂದು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.
ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಿತ್ರ ವರ್ಣೇಕರ್ ಅವರು ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ದೊರೆಯುವ ಎಲ್ಲಾ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗಂಭೀರ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಚಿಕಿತ್ಸೆಗಾಗಿ ಪ್ರತಿಯೊಬ್ಬರೂ ಆಯುಷಾಮನ್ ಕಾರ್ಡ್‌ಗಳನ್ನು ಮಾಡಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೆನರಾ ಬ್ಯಾಂಕ್‌ನ ಅಧಿಕಾರಿ ದಿನೇಶ್ ಅವರು, ಬ್ಯಾಂಕಿನ ಸಾಲ ಸೌಲಭ್ಯದ ಬಗ್ಗೆ ಕುರಿತು ತಿಳಿಸಿದರು. ಡಿಜಿಟಲ್ ವಿಡಿಯೋ ಪರದೆ ಮೂಲಕ ಯೋಜನೆಗಳ ಕುರಿತು ಪ್ರದರ್ಶನ ನೀಡಲಾಯಿತು. ಕೃಷಿ ಇಲಾಖೆಯಿಂದ ಡ್ರೋನ್ ಮುಖಾಂತರ ಔಷದಿ ಸಿಂಪರಣೆ ಪ್ರಾತ್ಯಕ್ಷಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ರಕ್ತದೊತ್ತಡ, ಮಧುಮೇಹ ರೋಗ ಪರೀಕ್ಷೆ ಮತ್ತು ಕ್ಷಯ ರೋಗ ಪರೀಕ್ಷೆಗಾಗಿ ಕಫ ಸಂಗ್ರಹ ಹಾಗೂ ಅಂಗಾಂಗ ದಾನ ನೋಂದಣಿ ಮಾಡಲಾಯಿತು.
ಈ ಸಂದರ್ಭದಲ್ಲಿ ರೂಪನಗುಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಮಾಂಜಿನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ಮಲ್ಲಿಕಾರ್ಜುನ್, ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.