Wednesday, May 13, 2026
Google search engine

Homeರಾಜ್ಯರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಹವಾಮಾನ ಇಲಾಖೆ ತಿಳಿಸಿದಂತೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲೂ ಮೇ 15 ಮತ್ತು 16ರಂದು ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸುಮಾರು 64.5 ಮಿ.ಮೀ ಇಂದ 115.5 ಮಿ.ಮೀ ವರೆಗೆ ಮಳೆ ದಾಖಲಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ತಾಪಮಾನವು 33°C ದಾಟುವ ಸಾಧ್ಯತೆಯಿದ್ದರೂ ಮಳೆಯ ಸಿಂಚನವಾಗಲಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮೋಡಕವಿದ ವಾತಾವರಣವಿರ ಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 34.8°C ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿಸಿಲಿನ ತಾಪದ ನಡುವೆಯೂ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದೆಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಜನರಲ್ಲಿ ಮನವಿ ಮಾಡಿದೆ.

RELATED ARTICLES
- Advertisment -
Google search engine

Most Popular