ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಹೆಸರನ್ನು ಶಿಫಾರಸು ಮಾಡಿದೆ. ಕರ್ನಾಟಕದ ಹಾಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂ ಕೋರ್ಟ್ ಗೆ ನೇಮಕ ಮಾಡಲಾಗಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ನ್ಯಾ. ಪಿಎಸ್ ದಿನೇಶ್ ಕುಮಾರ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಜನವರಿ ೨೦೧೫ ರಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು ಹೈಕೋರ್ಟ್‌ನ ನ್ಯಾಯಾಧೀಶರಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ವಿಭಾಗದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ ಎಂದು ಕೊಲಿಜಿಯಂ ಪ್ರಕಟಣೆ ತಿಳಿಸಿದೆ. ಕರ್ನಾಟಕ ಹೈಕೋರ್ಟ್‌ನ ಹಾಲಿ ೨ನೇ ಹಿರಿಯ ನ್ಯಾಯಮೂರ್ತಿಯಾಗಿರುವ ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ ೨೪ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮುನ್ನವೇ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರ ಪದೋನ್ನತಿ ನಂತರ ದಿನೇಶ್ ಕುಮಾರ್ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ.