ಬೆಂಗಳೂರು: ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ ಸುಪರ್ದಿಗೆ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯುವ ಸರ್ಕಾರದ ಕ್ರಮವನ್ನ ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠವು, ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ಆದೇಶ ನೀಡಿದೆ.
ಮೈಸೂರು ರಸ್ತೆಯ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆಯ ವೇಳೆ ಅಕ್ರಮ ನಡೆದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆಡಳಿತ ಮಂಡಳಿಯ ಸದಸ್ಯರು ಹಣ ಕಳ್ಳತನ ಮಾಡಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಅಲ್ಲದೆ ದೇವಾಲಯದಲ್ಲಿ ಆಡಳಿತ ನಿರ್ವಹಣೆ ಸರಿ ಇಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದೀಗ ವರದಿ ಆಧಾರದಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ನೀಡಲಾಗಿದೆ ಎಂದು ಹೇಳಿದ್ದರು. ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆದ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.