ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್ ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗು ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಸತ್ಯಮೇವ ಜಯತೆ : ಬಿಜೆಪಿ ಪೋಸ್ಟ್
“ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದೆ.
“ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ” ಎಂದು ಬಿಜೆಪಿ ಹೇಳಿದೆ.
“ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದೆ.