ನವದೆಹಲಿ: ನೀಟ್ ಹಾಗೂ ನೆಟ್ ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಲಾಗುವುದು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ. ಮತ್ತು ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಅಕ್ರಮದ ತನಿಖೆಯ ಜತೆಗೆ, ಪರೀಕ್ಷೆ ನಡೆಸುವ ಹೊಣೆ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ದತ್ತಾಂಶ ಕಾರ್ಯನಿರ್ವಹಣೆ ಪರಿಶೀಲಿಸಲು ಸರ್ಕಾರವು ವಿಶೇಷ ಸಮಿತಿಯನ್ನು ರಚಿಸಲಿದೆ. ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಸುಧಾರಿಸಲು ಉನ್ನತ ಮಟ್ಟದ ಸಮಿತಿಯಿಂದ ಶಿಫಾರಸುಗಳನ್ನು ಬಯಸಲಿದೆ ಎಂದರು.
ಸರ್ಕಾರ ಮತ್ತು ವ್ಯವಸ್ಥೆಯ ಮೇಲೆ ಜನರು ನಂಬಿಕೆ ಇಡಬೇಕು. ಸರ್ಕಾರ ಆದ ತಪ್ಪುಗಳನ್ನು ಸರಿಪಡಿಸುವ ಜವಾಬ್ದಾರಿ ವಹಿಸಿಕೊಳ್ಳುತ್ತಿದೆ. ವದಂತಿಗಳನ್ನು ಯಾರೂ ಹರಡಿಸಬಾರದು ಎಂದು ಮನವಿ ಮಾಡಿದರು.