ರಾಮನಗರ: ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಮಾನವ ಕಳ್ಳ ಸಾಗಾಣಿಕೆ ತಡೆಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅವರು ಹೇಳಿದರು.
ಅವರು ಜು. ೩೦ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮುಕ್ತಿ ಒಕ್ಕೂಟ ಕರ್ನಾಟಕ, ಶಾಂತ ಜೀವ ಜ್ಯೋತಿ ಹಾಗೂ ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷ ಜುಲೈ ೩೦ ರಂದು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಆಚರಿಸಲಾಗುತ್ತದೆ, ಈ ಕಾರ್ಯಕ್ರಮ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು, ಮಾನವ ಕಳ್ಳಸಾಗಾಣಿಕೆ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಈ ಪದ್ದತಿಯ ನಿರ್ಮೂಲನೆಗೆ ಎಲ್ಲರು ಕೈ ಜೋಡಿಸುವಂತೆ ಕರೆ ನೀಡಿದರು.
ಭಾರತೀಯ ಸಂವಿಧಾನದ ೨೩ ಮತ್ತು ೨೪ನೇ ವಿಧಿಯು ಶೋಷಣೆ ವಿರುದ್ಧ ಹಕ್ಕಿನ ಬಗ್ಗೆ ತಿಳಿಸುತ್ತದೆ. ಆ ಪ್ರಕಾರವಾಗಿ ಮಾನವ ಕಳ್ಳಸಾಗಣಿಕೆಯು ಕಾನೂನಿನ ಅನ್ವಯ ಶಿಕ್ಷಾರ್ಹ ಅಪರಾಧವಾಗಿದೆ. ಮಾನವ ಕಳ್ಳ ಸಾಗಾಣಿಕೆಯಲ್ಲಿ ತಂತ್ರಜ್ಞಾನದ ಬಳಕೆಯ ದುರುಪಯೋಗದ ಕುರಿತು ಶಾಲಾ ಮತ್ತು ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು ಎಂದರು.
ಮಕ್ಕಳು ಮತ್ತು ಮಹಿಳೆಯರನ್ನು ಜೀತ ಕಾರ್ಮಿಕ ಮತ್ತು ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳಲು ಹಾಗೂ ಭಿಕ್ಷಾಟನೆ ಮಾಡಿಸುವ ಉದ್ದೇಶದಿಂದ ಮಾನವ ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಮಾನವ ಕಳ್ಳ ಸಾಗಾಣಿಕೆ ಬಗ್ಗೆ ತಿಳಿದು ಬಂದರೆ ಮಹಿಳಾ ಮತ್ತು ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡುವ ಮೂಲಕ ಅವರನ್ನು ರಕ್ಷಿಸಬೇಕು ಎಂದು ಸಲಹೆ ನೀಡಿದರು.
ನಮ್ಮ ಸುತ್ತಮುತ್ತ ನಡೆಯುವ ವಿದ್ಯಾಮಾನಗಳನ್ನು ಸೂಕ್ಷ?ಮವಾಗಿ ಗಮನಿಸುತ್ತಿರಬೇಕು. ಮಾನವ ಕಳ್ಳ ಸಾಗಾಣಿಕೆಯ ಕಾಯ್ದೆ ಕಾನೂನುಗಳ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಹಣದ ಆಮಿಷ ಒಡ್ಡಿ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಂಡು ಮೋಸ ಮಾಡುವ ಸಂಭವಗಳು ಕಂಡುಬರುತ್ತಿವೆ, ಬಡತನದಲ್ಲಿರುವವರು ಮತ್ತು ಅನಕ್ಷರಸ್ಥರು ಇಂತಹ ಆಮಿಷಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ. ಆದ್ದರಿಂದ ಅಂತಹ ಪ್ರದೇಶಗಳಲ್ಲಿ ಈ ಪದ್ದತಿಯ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸವಿತಾ ಪಿ.ಆರ್. ಅವರು ಪ್ರತಿಜ್ಞಾ ವಿಧಿ ಭೋದಿಸಿದರು. ಬೆಂಗಳೂರು ಮುಕ್ತಿ ಒಕ್ಕೂಟ ಸದಸ್ಯ ಆರ್. ಮನೋಹರ್ ಮಾನವ ಕಳ್ಳ ಸಾಗಣಿಕೆಯ ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಸ್ವಾಗತಿಸಿದರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜಿನಿ ವಂದಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್ ನಾಗೇಂದ್ರ, ರಾಮನಗರ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ವಿ.ಚಂದ್ರಶೇಖರ್, ಕಾರ್ಯದರ್ಶಿ ತಿಮ್ಮೇಗೌಡ, ಬೆಂಗಳೂರು ಮುಕ್ತಿ ಒಕ್ಕೂಟದ ರಾಜೇಂದ್ರನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.