ಬೆಂಗಳೂರು : ಸಾಮಾನ್ಯ ಪ್ರಯಾಣಿಕರಂತೆ ಮಾರುವೇಷದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ಚಿಲ್ಲರೆ ಹಣದ ಸಮಸ್ಯೆಯಿಂದ ಬಸ್‌ನಿಂದ ಇಳಿಯಬೇಕಾದ ಘಟನೆ ಕುರಿತು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕರ ನೈಜ ಸಮಸ್ಯೆ ಅರಿಯಲು ಸಚಿವರು ಕೈಗೊಂಡ ಕ್ರಮವನ್ನು ಅವರು ಮುಕ್ತವಾಗಿ ಶ್ಲಾಘಿಸಿದ್ದು, ಡಿಜಿಟಲ್ ಯುಗದಲ್ಲೂ ಇಂತಹ ಪರಿಸ್ಥಿತಿ ಎದುರಾಗಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಬಗ್ಗೆ ಮಾತನಾಡಲು ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ಹಲವು ಬಾರಿ ದೂರವಾಣಿ ಕರೆ ಮಾಡಲು ಯತ್ನಿಸಿದ್ದರೂ ಸಂಪರ್ಕ ಸಾಧ್ಯವಾಗಲಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ವೇಳೆ, ಹಿಂದಿನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕರೆಗಳಿಗೆ ಸುಲಭವಾಗಿ ಸ್ಪಂದಿಸುತ್ತಿದ್ದರು ಎಂದು ಅವರು ನೆನಪಿಸಿಕೊಂಡಿದ್ದಾರೆ.
ಇಂದು ಸಣ್ಣ ಅಂಗಡಿಗಳಿಂದ ಹಿಡಿದು ಎಲ್ಲೆಡೆ ಕ್ಯೂಆರ್ ಕೋಡ್ ಮತ್ತು ಯುಪಿಐ ಮೂಲಕ ಹಣ ಪಾವತಿ ವ್ಯವಸ್ಥೆ ಲಭ್ಯವಿದ್ದು, ಬಿಎಂಟಿಸಿ ನಿರ್ವಾಹಕರು ಬಳಸುವ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳಲ್ಲೂ ಡಿಜಿಟಲ್ ಪಾವತಿ ಸೌಲಭ್ಯವಿದೆ. ಹಾಗಿದ್ದರೂ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರನ್ನು ಬಸ್‌ನಿಂದ ಇಳಿಸುವ ಪರಿಸ್ಥಿತಿ ಏಕೆ ನಿರ್ಮಾಣವಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.
ಡಿಜಿಟಲ್ ಪಾವತಿ ವ್ಯವಸ್ಥೆ ಇದ್ದರೂ ಅದನ್ನು ಬಿಎಂಟಿಸಿ ಬಸ್‌ಗಳಲ್ಲಿ ಸಮರ್ಪಕವಾಗಿ ಬಳಸಲಾಗುತ್ತಿಲ್ಲವೇ ಎಂಬ ಅನುಮಾನ ವ್ಯಕ್ತಪಡಿಸಿದ ಸುರೇಶ್ ಕುಮಾರ್, ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.



