ಚಾಮರಾಜನಗರ: ರಾಜ್ಯದ ಮೂರು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಚಾಮರಾಜನಗರ ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.
ಪುಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿತ್ತು. ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ೨೦೧೧ರಲ್ಲಿ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ ೨೦೨೪ರಲ್ಲಿ ನೋಂದಣಿ ಕಾಯ್ದೆ ೧೯೦೮ರ ಕಲಂ (೫) ಹಾಗೂ ಕಲಂ (೬) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಆದುದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.