ಹುಬ್ಬಳ್ಳಿ: ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಡಿಸೆಂಬರ್ ಅಂತ್ಯದೊಳಗೆ ಜಾರಿ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಇಂದು ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಸ ನೀತಿ ಕುರಿತು ಈಗಾಗಲೇ ಪೂರ್ವ ತಯಾರಿ ಆಗಿದ್ದು, ಇದು ಜಾರಿಯಾಗುವ ಮುನ್ನ ನಮ್ಮ ಸ್ಮಾರಕಗಳ ಸಂರಕ್ಷಣೆ ಕುರಿತು ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು. ನ. ೬ರಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಪ್ರವಾಸ ಆರಂಭವಾಗಲಿದೆ ಎಂದು ನುಡಿದರು.
ರಾಜ್ಯದಲ್ಲಿನ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸ್ಮಾರಕಗಳ ಸಂರಕ್ಷಣೆಗೆ ಯೋಜನೆ ಸಿದ್ಧಪಡಿಸಲಾಗುವುದು. ಪ್ರವಾಸಿ ಸ್ಥಳಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ. ಪ್ರವಾಸಿಗರ ಸಂಖ್ಯೆಯನ್ನು ದ್ವಿಗುಣಗೊಳಿಸಲು ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಅವರು ಹೇಳಿದರು.