ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.
ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ 3/4 ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು. ಮರಗಳು, ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.
ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್‌ಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟಿಕೊಂಡು, ಮಳೆಯಿಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು:
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರಜಾ ದಿನವೂ ಎಲ್ಲಾ ವಲಯ ಅಧಿಕಾರಿಗಳು/ಅಭಿಯಂತರರುಗಳು ತಮ್ಮ ವಲಯ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ಮಾಡಲು ಸೂಚಿಸಿದರು.
ಜೆಸಿಬಿಗಳ ಮೂಲಕ ಸ್ವಚ್ಛತೆ:
ಬೃಹತ್ ನೀರುಗಾಲುವೆ(ರಾಜಕಾಲುವೆ)ಗಳಲ್ಲಿ ಜೆಸಿಬಿಗಳ ಮೂಲಕ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಎಲ್ಲಾ ಕಡೆ ಜೆಸಿಬಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಲು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಡಾ. ಕೆ. ಹರೀಶ್ ಕುಮಾರ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್, ಕರೀಗೌಡ, ರಮೇಶ್, ರಮ್ಯಾ, ಸ್ನೇಹಲ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.