Thursday, August 14, 2025
Google search engine

Homeರಾಜ್ಯಸ್ವಾತಂತ್ರ್ಯ ದಿನಾಚರಣೆ : ಸುಗಮ ವೀಕ್ಷಣೆಗೆ E-Pass ಪಡೆಯಿರಿ : ಮಹೇಶ್ವರ್...

ಸ್ವಾತಂತ್ರ್ಯ ದಿನಾಚರಣೆ : ಸುಗಮ ವೀಕ್ಷಣೆಗೆ E-Pass ಪಡೆಯಿರಿ : ಮಹೇಶ್ವರ್ ರಾವ್

ಬೆಂಗಳೂರು : ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಸಾರ್ವಜನಿಕರ ಕಡೆ ಘಳಿಗೆ ನೂಕುನುಗ್ಗಲು ತಪ್ಪಿಸಲು ನೂತನವಾಗಿ ಜಾರಿ ಮಾಡಿರುವ ಇ-ಪಾಸ್ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಎಂ ಅವರು ಕರೆ ಕೊಟ್ಟರು.


ಆಸಕ್ತರು ಸೇವಾ ಸಿಂಧು ವೆಬ್ ಸೈಟ್ www.sevasindhu.karnataka.gov.in ನಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಇ-ಪಾಸ್ ಅನ್ನು ಪಡೆಯಬಹುದು ಹಾಗೂ ಗೇಟ್ ನಂಬರ್ -5ರ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಆಗಸ್ಟ್ 15 ರಂದು ಬೆಳಗ್ಗೆ 8.58 ಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದ ಅವರು, ಪಂಥಸಂಚಲನದಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಗೋವಾ ಪೊಲೀಸ್, ಕೆ.ಎಸ್.ಐ.ಎಸ್.ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಫಿಕ್ ವಾರ್ಡನ್, ಆಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ಬ್ಯಾಂಡ್ ನ ಒಟ್ಟು 35 ತುಕಡಿಗಳಲ್ಲಿ ಸುಮಾರು 1,150 ಮಂದಿ ಭಾಗವಹಿಸಲಿದ್ದಾರೆ ಎಂದರು.

ರಾಜೇಶ್ ಮತ್ತು ನಿರ್ಮಲ.ಡಿ.ಆರ್ ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ, ಹೇರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 650 ಮಕ್ಕಳಿಂದ “ಸ್ವಾತಂತ್ರ್ಯ ಸಂಗ್ರಾಮದ ವೀರ ಕನ್ನಡತೀಯರು”, ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ 500 ಮಕ್ಕಳಿಂದ “ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳು” ಹಾಗೂ ಪೊಲೀಸ್ ಇಲಾಖೆ ವತಿಯಿಂದ ಒಟ್ಟು 253 ಅಧಿಕಾರಿ / ಸಿಬ್ಬಂದಿಗಳಿಂದ ಕರ್ನಾಟಕ ಪೊಲೀಸ್ ಸಾಮೂಹ ವಾದ್ಯಮೇಳಗಳ” ಸಾಂಸ್ಕೃತಿ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್ ಅವರು ಮಾತನಾಡಿ, ಈ ಸಮಾರಂಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ ಒಟ್ಟು 2000 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ಹೆಚ್ಚುವರಿ 100 ಸಿಸಿ ಕ್ಯಾಮರ್ ವ್ಯವಸ್ಥೆ ಹಾಗೂ 2 ಬ್ಯಾಗೇಜ್ ಸ್ಕ್ಯಾನರ್, ಡಿಎಫ್ಎಂಡಿ ಮತ್ತು ಹೆಚ್.ಹೆಚ್.ಎಂ.ಡಿಗಳನ್ನು ಅಳವಡಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತಾ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತ ಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸುವಂತೆ ಕೋರಿದರು.

ಸಾರ್ವಜನಿಕರ ಸಹಾಯಕ್ಕಾಗಿ ಪೊಲೀಸರು ಸದಾ ಜನರೊಂದಿಗಿದ್ದು, ಯಾವುದೇ ಸಮಸ್ಯೆಯಾದಲ್ಲಿ ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112 ಕ್ಕೆ ಕರೆಮಾಡಬಹುದು ಎಂದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್.ಜಿ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular