ಚಾಮರಾಜನಗರ: ಸತತ ಮಳೆಯಿಂದಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ತೇವಾಂಶವಿರುವ ಕಾರಣ ಜಿಲ್ಲಾಡಳಿತದ ವತಿಯಿಂದ ಈ ಬಾರಿಯ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯತು (ಪೆರೇಡ್) ಮೈದಾನದಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯು ಜಿಲ್ಲಾಡಳಿತದಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲು ಎಲ್ಲ ಸಿದ್ದತೆ ಮಾಡಲಾಗಿತ್ತು. ಸತತವಾಗಿ ಮಳೆಯಾಗುತ್ತಿದ್ದು, ಮುಂದೆಯೂ ಮಳೆ ಬೀಳುವ ಮುನ್ಸೂಚನೆ ಇದೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪಸ್ತುತ ತೇವಾಂಶವಿದ್ದು ಮಣ್ಣು ಒದ್ದೆಯಾಗಿರುತ್ತದೆ. ಇದರಿಂದ ಸ್ವಾತಂತ್ರ ದಿನಾಚರಣೆಗಾಗಿ ಪಥಸಂಚಲನ, ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಸಲು ತೊಂದರೆಯಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣವನ್ನು ಪರಿಶೀಲಿಸಿದ್ದು, ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಸಲು ಪ್ರಸ್ತುತ ಕ್ರೀಡಾಂಗಣದಲ್ಲಿ ಅನಾನುಕೂಲವಾಗಿರುವುದರಿಂದ ಈ ಬಾರಿ ಜಿಲ್ಲಾಮಟ್ಟದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನಗರದ ಪೊಲೀಸ್ ಕವಾಯತು (ಪೆರೇಡ್) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಪೊಲೀಸ್ ಕವಾಯತು (ಪೆರೇಡ್) ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ 78ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಭಾಗವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದ್ದಾರೆ.