Saturday, April 19, 2025
Google search engine

Homeಸ್ಥಳೀಯಇಂದ್ರಧನುಷ್: ರೋಗಗಳ ವಿರುದ್ಧ ಲಸಿಕೆ ಅಭಿಯಾನ: ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಇಂದ್ರಧನುಷ್: ರೋಗಗಳ ವಿರುದ್ಧ ಲಸಿಕೆ ಅಭಿಯಾನ: ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು: ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳಿಂದ ವಂಚಿತರಾದಂತಹ 5 ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿಯರಿಗೆ ಬಿಟ್ಟುಹೋದ ಲಸಿಕೆಗಳನ್ನು ಪೂರ್ಣಗೊಳಿಸಲು ಸರ್ಕಾರ ಇಂದ್ರಧನುಷ್‌ ಅಭಿಯಾನ 5.0 ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಇವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು   ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ದಡಿ ತೀವ್ರತರ ಮಿಷನ್ ಇದ್ರ ಧನುಷ್ 5.0 ಕಾರ್ಯಕ್ರಮ ವನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  2023 ರ ಅಂತ್ಯದೊಳಗೆ ದಡಾರ ಮತ್ತು ರುಬೆಲ್ಲಾ ರೋಗಗಳ ನಿರ್ಮೂಲನೆ ಗುರಿಯಿದೆ. ಈ ರೋಗಗಳ ವಿರುದ್ಧ ಲಸಿಕಾ ಪ್ರಕ್ರಿಯೆ ಹಾಗೂ ಪಿಸಿವಿ 3ನೇ ಡೋಸ್‌ ಲಸಿಕಾ ಪ್ರಕ್ರಿಯೆಯ ವೇಗ ಹೆಚ್ಚಿಸಲು ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 3 ಸುತ್ತುಗಳಲ್ಲಿ ಅಭಿಯಾನ ನಡೆಯಲಿದೆ. ಅಭಿಯಾನವು ಆಗಸ್ಟ್(7ರಿಂದ 12ರವರೆಗೆ), ಸೆಪ್ಟೆಂಬರ್ (11ರಿಂದ 16ರವರೆಗೆ) ಮತ್ತು ಅಕ್ಟೋಬರ್ (9ರಿಂದ 14ರವರೆಗೆ) ತಿಂಗಳುಗಳಲ್ಲಿ ನಡೆಯಲಿದ್ದು, ಪ್ರತಿ ತಿಂಗಳಲ್ಲಿ 6 ದಿನ ಲಸಿಕಾ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇಂದ್ರಧನುಷ್‌ 5.0 ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಹಳ್ಳಿಗಳು, ಕೊಳಚೆ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಸಂಬಂಧ ಆರೋಗ್ಯಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಲಸಿಕೆ ಪಡೆಯುವವರನ್ನು ಗುರುತಿಸುವ ಕೆಲಸ ಆಗಬೇಕು.  ಲಸಿಕೆ ನೀಡುವಾಗ ಮಕ್ಕಳ ಆರೋಗ್ಯ ಪರಿಸ್ಥಿಯನ್ನು ಪರೀಕ್ಷಿಸಿ ನೀಡಬೇಕು. ಯಾವುದೇ ಅಡ್ಡ ಪರಿಣಾಮಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಶಾ ಕಾರ್ಯಕರ್ತೆಯರ ಯಾವುದೇ ಹುದ್ದೆಗಳು ಖಾಲಿ ಇರಬಾರದು. ಆಶಾ ಕಾರ್ಯಕರ್ತೆಯರು ಲಸಿಕೆ ಪಡೆಯಲು ಅರ್ಹರಾದವರನ್ನು ಗುರುತಿಸಿ ಲಸಿಕೆ ಪಡೆಯುವಂತೆ ಅರಿವು ಮೂಡಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡೆಂಗ್ಸೂ ಬಗ್ಗೆ ಜಾಗೃತಿ ವಹಿಸಿ

ಮಳೆಗಾಲ ಪ್ರಾರಂಭವಾಗಿದ್ದು ಡೆಂಗ್ಯೂ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ಡೆಂಗ್ಯೂ ಸೊಳ್ಳೆಗಳ ಕಡಿತದಿಂದ ಕಂಡು ಬರುತ್ತದೆ. ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಹಳೆಯ ಟೈರ್ ಗಳು, ತೆಂಗಿನ ಚಿಪ್ಪು ಗಳು, ಒಡೆದ ಮಡಿಕೆಗಳು, ಮನೆಯ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರಿನ ತೊಟ್ಟಿ ಹಾಗೂ ಟ್ಯಾಂಕ್ ಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಬೇಕು.  ಜ್ವರ ಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಅವರು ಮಾತನಾಡಿ  ಆಗಸ್ಟ್ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 0- 5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಬಿಣಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ. ಆಗಸ್ಟ್  ಸೆಪ್ಟೆಂಬರ್  ಹಾಗೂ ಅಕ್ಟೋಬರ್  ತಿಂಗಳಲ್ಲಿ ಲಸಿಕೆ ಅಭಿಯಾನವನ್ನು ಪ್ರತಿ ತಿಂಗಳು 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಫಲಾನುಭವಿಗಳು https://uwinselfregistration.mohfw.giv.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ 0-2 ವರ್ಷದ 5075 ಮಕ್ಕಳು, 2-5 ವರ್ಷದ 432 ಮಕ್ಕಳು ಹಾಗೂ 1211 ಗರ್ಭಿಣಿ ಮಹಿಳೆಯರನ್ನು ಗುರುತಿಸಲಾಗಿದ್ದು, 900 ವಿಶೇಷ ಲಸಿಕಾ ಕೇಂದ್ರಗಳ ಮೂಲಕ ರಕ್ಷಣಾತ್ಮಕ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ರಾದ ಆಶಾದ್ ಉರ್ ರೆಹಮಾನ್ ಶರೀಫ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular