ಬೆಂಗಳೂರು: ಹುಬ್ಬಳ್ಳಿಯಲ್ಲಿ ೩೦ ವರ್ಷಗಳ ಹಿಂದಿನ ರಾಮ ಮಂದಿರ ಹೋರಾಟ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಎಚ್ಚರಿಕೆಗೆ ಗೃಹ ಸಚಿವ ಪರಮೇಶ್ವರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಇನ್ಸ್‌ಪೆಕ್ಟರ್ ರನ್ನು ಜ.೯ ರೊಳಗೆ ಅಮಾನತು ಮಾಡಬೇಕು ಇಲ್ಲದೇ ಇದ್ದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಈ ದೇಶದಲ್ಲಿ ಕಾನೂನು ಇರಬಾರದು ಎಂಬ ಉದ್ದೇಶ ಬಿಜೆಪಿಗೆ ಇದ್ದರೆ ಮುತ್ತಿಗೆ ಹಾಕಲಿ ಎಂದು ಸವಾಲು ಹಾಕಿದ್ದಾರೆ.
ಇದೇ ವೇಳೆ ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲ್ಲ. ಯಾಕೆ ಅಮಾನತು ಮಾಡಬೇಕು? ಅಮಾನತು ಮಾಡುವಂತಹ ತಪ್ಪು ಏನು ಮಾಡಿದ್ದಾರೆ ಎಂದು ಗೃಹ ಸಚಿವರು ಪ್ರಶ್ನಿಸಿದ್ದು, ಹುಬ್ಬಳ್ಳಿ ಇನ್ಸ್‌ಪೆಕ್ಟರ್ ರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿರುವುದನ್ನೂ ಪರಮೇಶ್ವರ್ ನಿರಾಕರಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಕಾಪಾಡೋದು ನಮ್ಮ ಕರ್ತವ್ಯ. ಕಾನೂನಿನ ಪ್ರಕಾರ ಹುಬ್ಬಳ್ಳಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಅವರ ಬಂಧನ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಆಗುತ್ತಿದೆ ಎನ್ನುವುದನ್ನು ಹೊರತುಪಡಿಸಿದರೆ, ಪೊಲೀಸರು ಕಾನೂನು ವಿರುದ್ಧ ಏನು ಕೆಲಸ ಮಾಡಿಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ಇದನ್ನು ದೊಡ್ಡ ರಾಜಕೀಯ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯವನ್ನು ನಾವು ಸಹಿಸಲು ಸಾಧ್ಯವಿಲ್ಲ. ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ನ್ಯಾಯಾಲಯದಿಂದ ಸಮನ್ಸ್ ಜಾರಿ: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ೨೦೧೭ ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ೨೦೨೦ ರ ಮಾರ್ಚ್ ೧೯ ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ ೨೦೨೩ ರ ಸೆಪ್ಟೆಂಬರ್ ೭ರಂದು ಸರ್ಕಾರ ಅನುಮತಿ ನೀಡಿತ್ತು. ೨೦೨೩ರ ಅಕ್ಟೋಬರ್ ೨೪ ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ ೮ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರದ ಹಸ್ತಕ್ಷೇಪವಿಲ್ಲ; ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಮಾಧ್ಯಮಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ.