ಮೈಸೂರು: ಅಂಬಾವಿಲಾಸ ಅರಮನೆ ಮೈದಾನದಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗುವುದು. ಈ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಯೋಗಕ್ಕೆ ಪ್ರಸಿದ್ಧ ಸ್ಥಳವಾಗಿದ್ದು, 15 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಈ ದಿನಾಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಬೆಳಿಗ್ಗೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಯೋಗಪಟುಗಳು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಬೇಕು ಮತ್ತು ಯೋಗ ಮ್ಯಾಟ್ ತಾವೇ ತರಬೇಕು ಎಂದರು.
ಜೂನ್ 15 ರಂದು ಪೂರ್ವಾಭ್ಯಾಸ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಜೆ.ಎಸ್.ಎಸ್ ಸಂಸ್ಥೆ, ಸಿಸ್ಮಾಮ್, ಎನ್.ಸಿ.ಸಿ, ಎನ್.ಎಸ್.ಎಸ್, ಶಾಲಾ-ಕಾಲೇಜುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಸ್ಥಳದಲ್ಲಿ ಆಂಬುಲೆನ್ಸ್, ಕುಡಿಯುವ ನೀರು, ಶೌಚಾಲಯ, ಫೈಯರ್ ಸೌಲಭ್ಯ ಇತ್ಯಾದಿ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು.
ಕೆಎಸ್‌ಆರ್‌ಟಿಸಿ ಬಸ್ಸು, ಅರಮನೆ ಮಂಡಳಿಯಿಂದ ಸ್ಥಳಾವಕಾಶ, ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಇತ್ಯಾದಿಗೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಭಾಗವಹಿಸುವವರಿಗೆ ಪ್ರಮಾಣಪತ್ರ ನೀಡಲಾಗುವುದು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಯೋಗ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.