ಗಾಜಾ ಸಿಟಿ: ಗಾಜಾ ನಗರದ ಮನೆಯೊಂದರ ಮೇಲೆ ಇಸ್ರೇಲ್ ಸೇನಾಪಡೆ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ 18 ಮಂದಿ ಮೃತಪಟ್ಟಿದ್ದರು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯರಲ್ಲಿ ಒಬ್ಬರು ಗರ್ಭಿಣಿಯಾಗಿದ್ದು, ಮಗು ಸಹ ಮೃತಪಟ್ಟಿದೆ.
15 ತಿಂಗಳ ಯುದ್ಧವನ್ನು ಕೊನೆಗೊಳಿಸಲು ಮತ್ತು ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದದ ಕುರಿತಂತೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ದಾಳಿಗಳು ನಡೆದಿದ್ದು, ಭಾರಿ ಹಿನ್ನಡೆಯಾಗಿದೆ.
ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳ ಪ್ರಕಾರ, ಗಾಜಾ ಪಟ್ಟಿಯಲ್ಲಿ ಕದನ ವಿರಾಮ ಮತ್ತು ಒತ್ತೆಯಾಳುಗಳ ಬಿಡುಗಡೆಯ ಹಮಾಸ್ ಕರಡು ಒಪ್ಪಂದವನ್ನು ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಆದರೆ, ಒಪ್ಪಂದವನ್ನು ಇನ್ನಷ್ಟೇ ಅಂತಿಮಗೊಳಿಸಲಾಗುತ್ತಿದೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ದಕ್ಷಿಣ ಇಸ್ರೇಲ್‌ಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು, ಸುಮಾರು 250 ಜನರನ್ನು ಅಪಹರಿಸಿದ್ದರು.