ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೀಗಾಗಿ ಇದನ್ನು ನಡೆಸುವುದು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೂ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.
ಬಜೆಟ್‌ನಲ್ಲಿ ಏನಿದೆಯೋ ಅದರಂತೆ ಗ್ಯಾರಂಟಿ ಯೋಜನೆಗಳನ್ನು ಕೊಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವರು, ಜನಪ್ರತಿನಿಧಿಗಳಿಗೆ ಖಡಕ್ ಸೂಚನೆ ಕೊಟ್ಟ ನಂತರ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ತಮ್ಮ ಹೇಳಿಕೆಗಳನ್ನ ಬದಲಾಯಿಸಿದ್ದರು.