ಚಾಮರಾಜನಗರ: ಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಉದ್ದೇಶದಿಂದ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಜ 16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.