ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಜ. ೨೬ ರಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಸಶಸ್ತ್ರ ಮೀಸಲು ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು. ಗಣರಾಜ್ಯೋತ್ಸವ ಸಂಬಂಧ ರಚಿಸಿರುವ ಸಮಿತಿಗಳಾದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ ಸಮಿತಿ ಅವರು ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಜೊತೆಗೆ ಶಿಷ್ಟ್ಟಾಚಾರದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ಪತ್ರಿಕೆ ತಲುಪಿಸಿ ಎಂದು ಹೇಳಿದರು.
ವೆದಿಕೆಯ ಸಿದ್ಧತೆ, ಆಸನ, ಧ್ವನಿವರ್ಧಕ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಸಮಿತಿಯವರು ವ್ಯವಸ್ಥೆ ಮಾಡಿಕೊಳ್ಳಬೇಕು. ಸರ್ಕಾರಿ ಕಛೇರಿಗಳನ್ನು ದೀಪಾಲಂಕಾರಗೊಳಿಸಿ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮವು ನಿಗದಿಗೊಳಿಸಿದ ಸಮಯದಂತೆ ನಡೆಯಲಿ. ಪೊಲೀಸ್, ಎನ್‌ಸಿಸಿ, ಗಹರಕ್ಷಕ ದಳದ ಪಥಸಂಚಲನ, ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಲಿ ಎಂದರು.