ಮಂಗಳೂರು (ದಕ್ಷಿಣ ಕನ್ನಡ): ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು, ಎ.9ರಂದು ಜನಾಕ್ರೋಶ ಯಾತ್ರೆ ಮಂಗಳೂರಿಗೆ ಆಗಮಿಸಲಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಅವರು ಮಂಗಳೂರು ನಗರದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಯಾತ್ರೆಯ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು. ರಾಜ್ಯದ ಜನತೆಗೆ ಯುಗಾದಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲು ರಾಜ್ಯ ಕಾಂಗ್ರೆಸ್ ಸರಕಾರ ಅವಕಾಶ ನೀಡಿಲ್ಲ. ಹಾಲು ಮತ್ತು ಮೊಸರಿನ ದರ ಲೀಟರ್‌ಗೆ ನಾಲ್ಕು ರೂ., ವಿದ್ಯುತ್ ದರ ಯೂನಿಟ್‌ಗೆ 36 ಪೈಸೆ ಹೆಚ್ಚಿಸಿ ಜನತೆಗೆ ಆಘಾತ ನೀಡಿದೆ. ವಾಹನ ಖರೀದಿ ತೆರಿಗೆ, ಮುದ್ರಾಂಕ ಶುಲ್ಕ ಸಹಿತ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುವ ಮೂಲಕ ದುಬಾರಿಯ ವಾತಾವರಣವನ್ನು ಕಾಂಗ್ರೆಸ್ ಸರಕಾರ ಸೃಷ್ಟಿಸಿದೆ. ಅಧಿಕಾರಕ್ಕೆ ಬಂದ ಬಳಿಕ ಒಟ್ಟು ಮೂರು ಬಾರಿ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.