ಬೆಂಗಳೂರು : ಮಹಾಭಾರತ ಕಾಲದಿಂದಲೂ ವರದಿಗಾರಿಕೆ ಅಸ್ತಿತ್ವದಲ್ಲಿದ್ದು, ಆ ಕಾಲದಲ್ಲಿ ಪತ್ರಕರ್ತರನ್ನು ‘ವಾರ್ತಾಕಾರರು’ ಎಂದು ಕರೆಯಲಾಗುತ್ತಿತ್ತು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕವು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಾಭಾರತದ ಪ್ರಸಂಗವೊಂದನ್ನು ಉಲ್ಲೇಖಿಸಿದ ಅವರು, ಅಂದಿನ ಕಾಲದಲ್ಲಿ ವಾರ್ತಾಕಾರರ ಮೂಲಕ ಜನರಿಗೆ ಸುದ್ದಿಗಳನ್ನು ತಲುಪಿಸಲಾಗುತ್ತಿತ್ತು ಎಂದು ತಿಳಿಸಿದರು. ಅಲ್ಲದೆ ಸುದ್ದಿ ತಲುಪಿಸುವ ಜವಾಬ್ದಾರಿಯೊಂದಿಗೆ ಪತ್ರಕರ್ತರು ನೈತಿಕ ಮೌಲ್ಯಗಳನ್ನು ಕಾಪಾಡಿಕೊಂಡು ಸಮಾಜದ ವಿಶ್ವಾಸ ಉಳಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಪ್ರಸ್ತುತ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ಬದಲಾವಣೆಗೆ ಅನುಗುಣವಾಗಿ ಪತ್ರಕರ್ತರು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಎಐ ಯುಗಕ್ಕೆ ತಕ್ಕಂತೆ ತಮ್ಮ ಕೌಶಲ್ಯವನ್ನು ನಿರಂತರವಾಗಿ ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಿ.ವಿ.ಗುಂಡಪ್ಪ ಅವರು ಮಹಾನ್ ದಾರ್ಶನಿಕರಾಗಿದ್ದು, ಅವರು ಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ನಗರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಸೋಮಶೇಖರ ಗಾಂಧಿ, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಗೌಡ್ರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಹಲವು ಪತ್ರಕರ್ತರು ಉಪಸ್ಥಿತರಿದ್ದರು.



