ಮಡಿಕೇರಿ : ಕೊಡಗಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ೬೩ ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.
ಪೊನ್ನಂಪೇಟೆ ತಾಲ್ಲೂಕಿನ ಕಾಫಿ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಯ್ಯಮಾಡ ಮಾದಯ್ಯ ಎಂಬುವವರು ಕಾಫಿ ಎಸ್ಟೇಟ್ ಬಳಿ ಬೆಳಗಿನ ವಾಕಿಂಗ್ ಹೋಗಿದ್ದಾಗ, ಏಕಾಏಕಿ ಎದುರಿನಿಂದ ಬಂದ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲದೆ ಅರಣ್ಯ ಇಲಾಖೆ ಮೃತರ ಕುಟುಂಬಕ್ಕೆ ೧೫ ಲಕ್ಷ ರೂಪಾಯಿ ಪರಿಹಾರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.