ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿಯ ಕಂಚಿನ ಪ್ರತಿಮೆ ಜ. 27ರಂದು ಅನಾವರಣಗೊಳ್ಳಲಿದೆ.
ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ “ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಅಂದು ಸಂಜೆ 4.30ಕ್ಕೆ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡಾಂಬೆಯ ಪ್ರತಿಮೆ ಅನಾವರಣದ ಅಂಗವಾಗಿ ಬೆಂಗಳೂರಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಇದಕ್ಕೆ ಬಿಬಿಎಂಪಿ ಕೈಜೋಡಿಸಲಿದೆ. ಇದರ ಜತೆಗೆ ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳ ಮೇಲೆ ಕನ್ನಡ ಧ್ವಜ ರಾರಾಜಿಸಲಿದೆ. ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಉಚಿತವಾಗಿ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದು ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.