ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಹತ್ಯೆ ಯತ್ನ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್‌ಗೆ ನಿನ್ನೆ ಚೂರಿ ಇರಿದು ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣ ಸಂಬಂಧ ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, ಮೌನಪ್ಪ, ಸಂಪತ್ ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚಾಕು ಇರಿತಕ್ಕೊಳಗಾದ ಬಸವಂತ ಸ್ನೇಹಿತ ಮದನ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ದೂರನ್ನು ಆಧರಿಸಿ, ಎಸಿಪಿ ಖಡೇಬಜಾರ್ ಶೇರಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆ ನಡೆದ 24 ಗಂಟೆಗಳ ಒಳಗೆ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಹಲ್ಲೆಗೊಳಗಾದ ಬಸವಂತ ಉಳಿದ ಆರೋಪಿಗಳು ಸ್ನೇಹಿತರಾಗಿದ್ದರು. ಹಲ್ಲೆಗೆ ನಿಖರ ಕಾರಣ ಎನು ಅನ್ನೋದು ತನಿಖೆಯಿಂದ ಗೊತ್ತಾಗಲಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ತಿಳಿಸಿದ್ದಾರೆ.



