ಕೋಲಾರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಕೋಲಾರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಹೆಜ್ಜೇನು ದಾಳಿ ನಡೆಸಿದ ಹಿನ್ನೆಲೆ ಸಂಸದ ಎಸ್. ಮುನಿಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ಮತ್ತು ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.
ಸಂಸದರು, ಪೊಲೀಸರು ಸೇರಿ ೨೦ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ಈ ಪೈಕಿ ಕೆಲವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದರೆ, ಇತ್ತ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆದಿರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅಷ್ಟೇ ಅಲ್ಲದೆ, ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲದೆ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಗುತ್ತಿದೆ.