ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಡಿ. ೩೧ ರಂದು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಾರಿಗೆ ನೌಕರರ ಸಂಘದ ಮುಖಂಡ ಅನಂತ ಸುಬ್ಬರಾವ್ ಘೋಷಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ನಿಗಮಗಳ ನೌಕರರ ಸಂಬಂಳ ಹೆಚ್ಚಳ, ಬಾಕಿ ಪಾವತಿಗಳ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯವು ಒಟ್ಟು ೧೭೫೦ ಕೋಟಿ ರೂಪಾಯಿಗಳ ಬಾಕಿ ಮತ್ತು ಹೆಚ್ಚುವರಿ ೩೯೯.೨೯ ಕೋಟಿ ಗ್ರಾಚ್ಯುಟಿ ಪಾವತಿಗಳನ್ನು ನಿವೃತ್ತ ಕಾರ್ಮಿಕರಿಗೆ ನೀಡಬೇಕಿದೆ. ಈ ಬಗ್ಗೆ ಡಿಸೆಂಬರ್ ೯ ರಂದು ‘ಬೆಳಗಾವಿ ಚಲೋ’ ಮುಷ್ಕರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕರದ ನೋಟಿಸ್ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೈಗಾರಿಕಾ ವಿವಾದ ಕಾಯಿದೆ ಸೆಕ್ಷನ್- ೨೨ ರ ಪ್ರಕಾರ ಮುಷ್ಕರಕ್ಕೂ ಮುನ್ನ ೨೧ ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಈ ಹಿನ್ನೆಲೆಯಲ್ಲಿ ಡಿಸೆಂಬರ್- ೯ ರಂದು ಸಿಎಂಗೆ ನೋಟಿಸ್ ಕೊಟ್ಟು ಡಿಸೆಂಬರ್- ೩೧ ರಿಂದ ಸಾರಿಗೆ ಮುಷ್ಕರ ಆರಂಭಿಸಲು ನಿರ್ಧರಿಸಲಾಗಿದೆ. ಅದಕ್ಕೆ ಆರು ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, ಆ ಆರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ ಎಂದು ಅನಂತ ಸುಬ್ಬರಾವ್ ಹೇಳಿದ್ದಾರೆ.
ರಾಜ್ಯಾದ್ಯಂತ ಬಸ್ ಸೇವೆಗಳ ಮೇಲೆ ಮುಷ್ಕರದಿಂದಾಗಿ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಅನಂತ ಸುಬ್ಬರಾವ್, ಕೆಎಸ್‌ಆರ್‌ಟಿಸಿ ಮುಷ್ಕರ ಹೇಗೆ ನಡೆಯುತ್ತದೆ ಎಂಬುದು ನಿಮಗೆ ಗೊತ್ತಿದೆ. ನಮ್ಮನ್ನು ಕರೆದು ಗಾಳಿ ತೋರಿಸಿ ಮುಷ್ಕರ ವಾಪಸ್ ಪಡೆಯುವಂತಿಲ್ಲ, ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಮುಷ್ಕರ ನಿರ್ಧಾರ ಹಿಂಪಡೆಯುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ೨೦೨೪ ಜನವರಿಯಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಬೇಕಾಗಿತ್ತು. ಅದಲ್ಲದೆ ಕೆಎಸ್‌ಆರ್ಟಿಸಿ, ಬಿಎಂಟಿಸಿ, ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ ೩೮ ತಿಂಗಳ ಅರಿಯರ್ಸ್ ಬಾಕಿ ಹಣವನ್ನು ಬಿಡುಗಡೆ ಕೂಡ ಮಾಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ೧೭೫೦ ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು ೩೯೯.೨೯ ಕೋಟಿ ರುಪಾಯಿ ನೀಡಬೇಕಿದೆ. ಆದರೆ ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಈ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ ಎಂದು ವಿವರಿಸಿದರು.
ಈ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿಯ ಎಲ್ಲಾ ಸಂಘಟನೆಗಳು ಒಪ್ಪಿಗೆ ಸೂಚಿಸಿವೆ. ಮುಷ್ಕರವನ್ನು ಯಶಸ್ವಿಗೊಳಿಸಲು ಮುಖಂಡರು ಬದ್ಧರಾಗಿದ್ದು, ಮುಷ್ಕರದ ಬಗ್ಗೆ ಪ್ರತಿಯೊಬ್ಬ ನೌಕರರು ಸಿದ್ಧರಾಗಿದ್ದು, ಎಲ್ಲರಿಗೂ ಮಾಹಿತಿ ನೀಡುವ ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರದ ನಿರ್ಲಕ್ಷ್ಯದಿಂದ ಸಾರಿಗೆ ನೌಕರರು ಮಾತ್ರವಲ್ಲದೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೀಡುವ ಸೇವೆಗಳನ್ನು ಹೆಚ್ಚು ಅವಲಂಬಿಸಿರುವ ಸಾರ್ವಜನಿಕರಲ್ಲಿ ಆತಂಕದ ಕಿಡಿ ಹೊತ್ತಿಸಿದೆ.