ಚಾಮರಾಜನಗರ: ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕೋವಿಡ್-19 ಸಂಬಂಧ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆ ಅಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಖುದ್ದು ಹಾಗೂ ಗೂಗಲ್ ಮೀಟ್ ಮೂಲಕ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ ಪೂರ್ವಭಾವಿ ಕ್ರಮಗಳನ್ನು ಪಾಲನೆ ಮಾಡಬೇಕಿದೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ಆರೋಗ್ಯ ಸಂಬಂಧಿ ಸುತ್ತೋಲೆ ಆದೇಶಗಳನ್ನು ಪಾಲನೆ ಮಾಡಬೇಕು. ಮಾರ್ಗಸೂಚಿಗಳನ್ನು ಅನುಸರಿಸಬೇಕು. ಗಡಿ ಚೆಕ್‍ಪೋಸ್ಟ್‍ಗಳಲ್ಲಿ ಜಾಗೃತಿ ಮೂಡಿಸಬೇಕು. ಮುನ್ನೆಚ್ಚರಿಕೆ ಕ್ರಮಗಳ ಕುರಿತ ತಿಳಿವಳಿಕೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಲಭ್ಯವಿರುವ ವ್ಯವಸ್ಥೆಗಳು, ಆಸ್ಪತ್ರೆಯ ಸನ್ನದ ಸ್ಥಿತಿ ಸೇರಿದಂತೆ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಯವರು ಚರ್ಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕರು ಮತ್ತು ಡೀನ್ ಡಾ. ಮಂಜುನಾಥ್, ತಹಶೀಲ್ದಾರ್ ಬಸವರಾಜು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಕೃಷ್ಣಪ್ರಸಾದ್, ನಿವಾಸಿ ವೈದ್ಯಾಧಿಕಾರಿಗಳಾದ ಡಾ. ಮಹೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಿರಿಧರ್, ಇತರೆ ಅಧಿಕಾರಿಗಳು ಇದ್ದರು.