ಬೆಂಗಳೂರು : ಬಹುದಿನಗಳಿಂದ ಖಾಲಿ ಉಳಿದಿದ್ದ ‘ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ’ದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಡ್ವೊಕೇಟ್ ಜನರಲ್ ಮಧುಸೂದನ್ ಆರ್.ನಾಯಕ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಶುಕ್ರವಾರ ಈ ಸಂಬಂಧ ಆದೇಶ ಹೊರಡಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ, ಜಯಪ್ರಕಾಶ್ ಹೆಗ್ಡೆ ಅವರಿಂದ ತೆರವಾಗಿದ್ದ ಹುದ್ದೆಗೆ ಮಧುಸೂದನ್ ನಾಯಕ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಇವರ ಅಧಿಕಾರದ ಅವಧಿ ಮೂರು ವರ್ಷಗಳು ಎಂದು ತಿಳಿಸಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ’(ಜಾತಿಗಣತಿ) ವರದಿ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಪರ-ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿರುವುದು ಮಹತ್ವ ಪಡೆದುಕೊಂಡಿದೆ.