ಬೆಂಗಳೂರು: ದಿಲ್ಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಂಧಿತರಾದ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದಿಲ್ಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಲು ಅವಕಾಶ ನೀಡಬೇಕು ಎಂದು ಮಧ್ಯಪ್ರದೇಶ ಸರಕಾರವನ್ನು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಟೀಕಿಸಿದರು.
ನರೇಂದ್ರ ಮೋದಿ ಅವರ ಸರಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಎಂದು ಹೇಳಿದ್ದಾರೆ.