ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್‌ಹಿಲ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ಕಾರ್ಮಿಕರು. ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಮಣ್ಣು ಕುಸಿದಿದೆ. ಈ ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಎಂಬುವವರು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ.
ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಹಿನ್ನೆಲೆ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಚರಣೆ ನಡೆಸಿದರು. ಆದರೆ, ಮೂವರು ಆ ವೇಳೆಗಾಗಲೇ ಪ್ರಾಣ ಕಳೆದುಕೊಂಡಿದ್ದರು ಎನ್ನಲಾಗಿದೆ. ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಸ್ಥಳದಲ್ಲಿ ಸುಮಾರು ೭ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯರುಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಟೋನ್ ಹಿಲ್ ಬಳಿ ಕಟ್ಟಡ ನಿರ್ಮಾಣ ಸಂಬಂಧ ಸುಮಾರು ೧೫ ಅಡಿ ಎತ್ತರದ ಬರೆ ತೆಗೆದು ಕೆಲಸ ಮಾಡಲಾಗುತ್ತಿತ್ತು. ಪ್ರದೀಪ್ ಎಂಬವರಿಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆದಾರ ಮನು ಎಂಬವರು ನಡೆಸುತ್ತಿದ್ದರು. ಒಳಭಾಗದಲ್ಲಿ ಐವರು ಕಾರ್ಮಿಕರು ಮತ್ತು ಹೊರಭಾಗದಲ್ಲಿ ಇಬ್ಬರು ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಮಣ್ಣು ಕುಸಿದಿದೆ. ಇವರಲ್ಲಿ ನಾಲ್ವರ ಮೇಲೆ ಮಣ್ಣು ಬಿದ್ದಿದ್ದು, ಒಬ್ಬರನ್ನು ಆ ಕ್ಷಣದಲ್ಲೇ ರಕ್ಷಿಸಲಾಯಿತು. ಉಳಿದ ಮೂವರು ಮಣ್ಣಿನಡಿ ಸಿಲುಕಿದ್ದು, ಅವರನ್ನು ಮಣ್ಣಿನಿಂದ ಹೊರತೆಗೆಯಲಾಗಿದೆ. ಮೇಲ್ನೋಟಕ್ಕೆ ನಿರ್ಲಕ್ಷ್ಯದಿಂದ ಘಟನೆ ನಡೆದಿದರುವ ಸಾಧ್ಯತೆ ಇದ್ದು, ಅನುಮತಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ.
-ಕೆ.ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ