Saturday, April 19, 2025
Google search engine

Homeಸ್ಥಳೀಯಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿ

ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿ

ಮೈಸೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ನೀಡಿರುವ ಅನುದಾನವನ್ನು ಆರ್ಥಿಕ ವರ್ಷದಲ್ಲಿ ಸಂಪೂರ್ಣ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಅನುದಾನ ಬಳಕೆ ಆಗದೆ ವ್ಯರ್ಥವಾಗಬಾರದು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಬಾಬು ಜಗಜೀವನರಾಮ್ ಭವನದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸರ್ಕಾರದಿಂದ ಬಿಡುಗಡೆ ಆಗುವವರೆಗೆ ಕಾಯಬಾರದು. ಫಲಾನುಭವಿಗಳನ್ನು ಆಯ್ಕೆ ಮಾಡಿ ಇಟ್ಟುಕೊಳ್ಳಿ. ಅನುದಾನ ಬಿಡುಗಡೆ ಆದ ತಕ್ಷಣ ಸೌಲಭ್ಯ ನೀಡಲು ಅನುಕೂಲವಾಗುತ್ತದೆ. ಇದರಿಂದ ಅನುದಾನ ವ್ಯರ್ಥವಾಗುವುದನ್ನು ತಡೆಯಬಹುದು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳು ಅರ್ಜಿ ಸಲ್ಲಿಸುವಾಗ ಸಣ್ಣ ಪುಟ್ಟ ದಾಖಲಾತಿಗಳನ್ನು ಸಲ್ಲಿಸದೆ ಇದ್ದರೆ, ಅವರಿಂದ ತಾವೇ ಮುತುವರ್ಜಿ ವಹಿಸಿ ದಾಖಲೆಗಳನ್ನು ಪಡೆದುಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಗಳನ್ನು ವಿತರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಭೂಮಿ ಇಲ್ಲದೆ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳನ್ನು ಗುರುತಿಸಿ ಪಟ್ಟಿ ಮಾಡಿ. ಇವರಿಗೆ ಸರ್ಕಾರದ ವತಿಯಿಂದ ಭೂಮಿ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಡಿಗಳಲ್ಲಿ ವಾಸಿಸುವ ಕೆಲವು ಜನರ ಬಳಿ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾಬ್ ಕಾರ್ಡ್‌ಗಳು, ಬ್ಯಾಂಕ್ ಅಕೌಂಟ್‌ಗಳು ಇಲ್ಲ. ಈ ಬಗ್ಗೆ ಪರಿಶೀಲಿಸಿ ಕ್ಯಾಂಪ್‌ಗಳನ್ನು ಮಾಡಿ ಪಡಿತರ ಚೀಟಿ, ಬ್ಯಾಂಕ್ ಅಕೌಂಟ್, ಅಧಾರ್ ಕಾರ್ಡ್ ಹಾಗೂ ಜಾಬ್ ಕಾರ್ಡ್‌ಗಳನ್ನು ವಿತರಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಎಲ್ಲರೂ ರಿಜಿಸ್ಟರ್ ಮಾಡಿಕೊಳ್ಳಿ. ಸೆ.೧೫ರಂದು ತಮ್ಮ ಕಚೇರಿಗಳಲ್ಲಿ ಸಂವಿಧಾನ ಓದು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ವಿವಿಧ ಇಲಾಖೆಗಳು ಹಾಗೂ ನಿಗಮಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ನೀಡುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು. ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಾಸ್ಟೆಲ್‌ಗಳಿಗೆ ಅಗತ್ಯ ಜಾಗ ಗುರುತಿಸಿ ನೀಡುವಂತೆ ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದ ಅವರು, ಸಾಮಾಜಿಕ ಅರಣ್ಯ ಪ್ರದೇಶವನ್ನು ಹಾಸ್ಟೆಲ್ ನಿರ್ಮಾಣಕ್ಕೆ ನೀಡಲು ಯಾವುದೇ ಕಾಯ್ದೆಗಳು ಅಡ್ಡಿ ಬರುವುದಿಲ್ಲ. ಪರಿಶಿಷ್ಟ ಪಂಗಡದ ಹಾಸ್ಟಲ್‌ಗಳನ್ನು ಬುಡಕಟ್ಟು ಜನರು ಹೆಚ್ಚು ಇರುವ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕು. ಇಂದು ಸಂಜೆಯೊಳಗೆ ಹಾಸ್ಟೆಲ್ ನಿರ್ಮಾಣಕ್ಕೆ ಗುರುತಿಸಿರುವ ಜಾಗಗಳನ್ನು ಸರ್ವೇ ಮಾಡಿ ಸಣ್ಣ ಪುಟ್ಟ ತೊಡಕುಗಳನ್ನು ನಿವಾರಿಸಬೇಕು.
-ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ

RELATED ARTICLES
- Advertisment -
Google search engine

Most Popular