ರಾಮನಗರ: ಸಾರ್ವಜನಿಕರು ಪೊಲೀಸ್ ಅಧಿಕಾರಿಗಳ ದುರ್ನಡತೆಯ ವಿರುದ್ದ ದೂರು ನೀಡಬಹುದು ಎಂದು ನಿವೃತ್ತ ನ್ಯಾಯಾಧೀಶರು ಹಾಗೂ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ಎನ್.ಕೆ. ಸುಧೀಂದ್ರ ರಾವ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ ವಿಮರ್ಶನಾ ಸಭೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಜನರಿಗೆ ಪೊಲೀಸ್ ದೂರು ಪ್ರಾಧಿಕಾರದ ಬಗ್ಗೆ ಅರಿವು ಮೂಡಿಸಿ, ಯಾವುದೇ ಅನೈತಿಕ ಘಟನೆಗಳು ಸಂಭವಿಸಿದಾಗ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಲು ಜಾಗೃತಿ ಮೂಡಿಸುವುದು ಈ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ರಾಮನಗರ ಜಿಲ್ಲಾ ಪ್ರಾಧಿಕಾರದ ಕಾರ್ಯವೈಖರಿ ಮತ್ತು ಕೋಮು ಸೌಹಾರ್ದತೆ ನಮಗೆ ಸಮಾಧಾನ ತಂದಿದೆ. ಆದರೂ ಹೆಚ್ಚಿನ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ನಾವು ಚರ್ಚಿಸಿ ಕೆಲವು ನಿರ್ಧಾರಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
ರಾಮನಗರ ಜಿಲ್ಲೆಯಲ್ಲಿ ಇಲ್ಲಿಯವರೆಗೂ ೩೮ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ೩೭ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿಗಳು ಜಿಲ್ಲೆಯ ದೂರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ಹೇಳಿದರು.
ದೂರುಗಳನ್ನು ನಾವು ಸಾಮಾನ್ಯ ದುರ್ನಡತೆ ಮತ್ತು ತೀವ್ರ ದುರ್ನಡತೆ ಎಂದು ಎರಡು ರೀತಿಯಲ್ಲಿ ದಾಖಲಿಸಬಹುದು, ಇದು ಸಾಮನ್ಯ ಪೊಲೀಸ್ ಪೇದೆಯಿಂದ ಮೇಲ್ಮಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ದೂರನ್ನು ದಾಖಲಿಸಬಹುದು. ದೂರುಗಳಿದ್ದಲ್ಲಿ ದೂ.ಸಂಖ್ಯೆ: ೦೮೦-೨೭೨೭೧೧೦೧ ಅನ್ನು ಸಂಪರ್ಕಿಸಬಹುದಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಪೊಲೀಸ್ ಮಹಾ ನಿರ್ದೇಶಕ ಮಾಲಿನಿ ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ದೇವಜ್ಯೋತಿ ರೇ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.