ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ಅಮಾನತುಗೊಳಿಸುವಂತೆ ಮತ್ತು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ,ಪ್ರತಿಭಟನೆಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಮಂಗಳೂರು ಇವುಗಳ ಆಶ್ರಯದಲ್ಲಿ ಕ್ಲಾಕ್ ಟವರ್ ಬಳಿ ಸಾಮೂಹಿಕ ಧರಣಿ ನಡೆಯಿತು.

ಧರಣಿ ಉದ್ಘಾಟಿಸಿ ಮಾತನಾಡಿದ ದ.ಕ. ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ಅವರನ್ನು ವರ್ಗಾವಣೆಗೆ ಆಗ್ರಹಿಸಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ರಾಜ್ಯ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂಬ ಭರವಸೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ಬಗ್ಗೆ ನಮಗೆ ನಂಬಿಕೆ ಇದೆ. ಮಂಗಳೂರು ಸುಸಂಸ್ಕೃತ ನಗರ. ಇಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಇಷ್ಟೊಂದು ದೀರ್ಘಾವಧಿ ಪ್ರತಿಭಟನೆ ಈ ವರೆಗೂ ನಡೆದಿಲ್ಲ. ಅದು ಕೂಡಾ ಜನಪರ ಸಂಘಟನೆಗಳಿಂದ. ಆದ್ದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.