ಮಂಗಳೂರು :ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾರ್ಯವನ್ನು ಕೂಡಲೇ ಪೂರ್ಣ ಮಾಡಬೇಕು. ಜೊತೆಗೆ ವಾಹನ ಸಂಚಾರಕ್ಕೆ ಅಯೋಗ್ಯವಾಗಿರುವ ಪರ್ಯಾಯ ಒಳರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿಂದು ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯಿತು.
ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಹೋರಾಟ ಸಮಿತಿಯ ಗೌರವಾಧ್ಯಕ್ಷ ದಿಲ್ ರಾಜ್ ಆಳ್ವ, ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಜನತೆಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ವಾಗ್ದಾನವಿತ್ತ ರೈಲ್ವೆ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯು, ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸದೆ ಜನಸಾಮಾನ್ಯರಿಗೆ ಮೋಸ ಮಾಡಿದೆ.
ಸಾಮಾನ್ಯ ಮೇಸ್ತ್ರಿಗೆ ಇರುವಷ್ಟು ಜ್ಞಾನ ಮಂಗಳೂರಿನ ಅಧಿಕಾರಿಗಳಿಗೆ ಇಲ್ಲವಾಗಿದೆ. ರೈಲ್ವೆ ಇಲಾಖೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಸಾಮಾನ್ಯ ಜನತೆಯ ಸಂಕಷ್ಟವನ್ನು ಕೇಳುವವರೇ ಇಲ್ಲವಾಗಿದೆ. ಈ ಮೂಲಕ ರೈಲ್ವೆ ಇಲಾಖೆಯ ಸರ್ವಾಧಿಕಾರಿ ವರ್ತನೆಯನ್ನು ಜನತೆ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ ಎಂದರು.