ತಮಿಳುನಾಡು : ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡಿನ ಅನುಮತಿಯಿಲ್ಲದೆ ಮೇಕೆದಾಟು ಅಣೆಕಟ್ಟು ಪ್ರದೇಶದಲ್ಲಿ ಒಂದು ಇಟ್ಟಿಗೆಯನ್ನೂ ಹಾಕಲು ಬಿಡುವುದಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಬಿ.ಮಾಣಿಕ್ಯಂ ಟ್ಯಾಗೋರ್ ಎಚ್ಚರಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ, ಅದೇ ಪಕ್ಷದ ತಮಿಳುನಾಡು ಘಟಕದಿಂದಲೇ ಯೋಜನೆಗೆ ಬಹಿರಂಗ ವಿರೋಧ ವ್ಯಕ್ತವಾಗಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ಇತ್ತೀಚೆಗೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಬಿ. ಮಾಣಿಕ್ಯಂ ಟ್ಯಾಗೋರ್ ಜಿಲ್ಲಾ ಕಾಂಗ್ರೆಸ್ ಸಮಿತಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಭೆಯ ಬಳಿಕ ಮಾತನಾಡಿದ ಅವರು, ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಹಾಗೂ 2018ರ ಸುಪ್ರೀಂ ಕೋರ್ಟ್ ಆದೇಶಗಳಿಗೆ ವಿರುದ್ಧವಾಗಿ ಕರ್ನಾಟಕ ಸರ್ಕಾರ ಈ ಯೋಜನೆಯನ್ನು ಮುಂದುವರಿಸುತ್ತಿದೆ. ಇದನ್ನು ತಮಿಳುನಾಡು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ತಮಿಳುನಾಡು ರೈತರ ಹಿತಾಸಕ್ತಿಯನ್ನು ರಕ್ಷಿಸಲು ಯಾವುದೇ ಹಿಂಜರಿಕೆಯಿಲ್ಲದೆ ಹೋರಾಟ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದು, ರಾಜ್ಯಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಜನಾಂದೋಲನಕ್ಕೆ ಸಿದ್ಧತೆ ನಡೆಯುತ್ತಿದೆ ಎಂದಿದ್ದಾರೆ. ಒಂದೇ ಪಕ್ಷದ ಎರಡು ರಾಜ್ಯ ಘಟಕಗಳು ಎರಡು ವಿಭಿನ್ನ ನಿಲುವುಗಳನ್ನು ತೆಗೆದುಕೊಂಡಿರುವುದು ಕಾವೇರಿ ರಾಜಕೀಯದಲ್ಲಿ ಹೊಸ ಒತ್ತಡವನ್ನು ಸೃಷ್ಟಿಸಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.



