Friday, April 18, 2025
Google search engine

Homeರಾಜ್ಯಸುದ್ದಿಜಾಲಕುಡಿಯುವ ನೀರು ಸಮಸ್ಯೆ ಶೀಘ್ರ ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ

ಕುಡಿಯುವ ನೀರು ಸಮಸ್ಯೆ ಶೀಘ್ರ ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ

ಚಾಮರಾಜನಗರ: ಜನರಿಗೆ ಶುದ್ಧ ಕುಡಿಯುವ ಪೂರೈಸುವುದಲ್ಲದೆ, ಜಿಲ್ಲೆಯ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಕುಡಿಯುವ ನೀರಿನ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಅವಶ್ಯ ಕ್ರಮ ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಸತತವಾಗಿ ಮಳೆಯಾಗುತ್ತಿದ್ದು, ಕುಡಿಯುವ ನೀರಿನ ಪರಿಸ್ಥಿತಿ ಸುಧಾರಿಸಲಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ತಾಂತ್ರಿಕ ಸಮಸ್ಯೆಗಳು ಎದುರಾದರೂ ಅದನ್ನು ಸಮರ್ಪಕವಾಗಿ ನಿಭಾಯಿಸಿ ಕುಡಿಯುವ ನೀರನ್ನು ತ್ವರಿತವಾಗಿ ಪೂರೈಸಲು ಆದ್ಯತೆ ನೀಡಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ತಾಕೀತು ಮಾಡಿದರು.

ಜನತೆಗೆ ಶುದ್ದ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಕೊರೆಸಿರುವ ಬೋರ್‍ವೆಲ್ ಬಳಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ನೀರಿನ ಟ್ಯಾಂಕ್‍ಗಳನ್ನು ಆಗಾಗ್ಗೆ ಸ್ವಚ್ಚಗೊಳಿಸಬೇಕು. ಕುಡಿಯುವ ನೀರಿನ ಪೈಪ್‍ಲೈನ್ ಸೋರಿಕೆಯನ್ನು ಕೂಡಲೇ ಸರಿಪಡಿಸಬೇಕು. ಕುಡಿಯುವ ನೀರಿಗೆ ಇತರೆ ಕಲುಷಿತ ನೀರು ಸೇರದಂತೆ ನಿಗಾ ವಹಿಸಬೇಕು. ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿಗಳು ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಈ ಬಗ್ಗೆ ತುರ್ತು ಪರಿಹಾರ ಕ್ರಮಗಳನ್ನು ವಹಿಸಬೇಕು. ತಪ್ಪಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಉಸ್ತುವಾರಿ ಸಚಿವರು ಸೂಚಿಸಿದರು.

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು. ಅಂತಹ ಪ್ರಕರಣ ಜಿಲ್ಲೆಯಲ್ಲಿ ಮತ್ತೆ ಮರುಕಳಿಸದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿರುವ ಶುದ್ಧ ಕುಡಿಯುವ ನೀರಿನ (ಆರ್.ಒ ಪ್ಲಾಂಟ್) ಘಟಕಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದರೆ ಸಂಬಂಧಪಟ್ಟ ಏಜೆನ್ಸಿಗಳಿಗೆ ಟೈಮ್‍ಲೈನ್ ನಿಗದಿಪಡಿಸಿ ದುರಸ್ಥಿಪಡಿಸಲು ಮುಂದಾಗಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವರಿಂದ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಅಗತ್ಯವಿರುವಷ್ಟು ದಾಸ್ತಾನು ಇಟ್ಟುಕೊಳ್ಳಬೇಕು. ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಖಾಸಗಿ ಅಂಗಡಿಗಳಿಗೆ ಸೂಚನೆ ನೀಡಬೇಕು. ಸೊಸೈಟಿ ಮೂಲಕ ರೈತರಿಗೆ ರಸಗೊಬ್ಬರ ಒದಗಿಸಬೇಕು. ಯೂರಿಯಾ ಗೊಬ್ಬರವನ್ನು ಕಡಿಮೆ ಬೆಲೆಗೆ ಖರೀದಿಸಿ ಅಂತರರಾಜ್ಯದಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಸಂಬಂಧ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ಮಳೆಗಾಳಿಯಿಂದ ಉಂಟಾಗಿರುವ ಬೆಳೆಹಾನಿಗೆ ಕಾಲಮಿತಿಯಲ್ಲಿ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು.

ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ ಜಿಲ್ಲೆಯಾದ್ಯಂತ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಸಮಸ್ಯೆ ಎದುರಾಗುವ ಮೊದಲೇ ಅಧಿಕಾರಿಗಳು ಕಾರ್ಯಸನ್ನದ್ಧರಾಗಬೇಕು. ಜಿಲ್ಲೆಯಲ್ಲಿ ಬಡವರು, ಅಸಹಾಯಕರು, ಹಿಂದುಳಿದವರು, ಪರಿಶಿಷ್ಟ ವರ್ಗದವರು ಅಧಿಕ ಸಂಖ್ಯೆಯಲ್ಲಿದ್ದು, ನಿರೀಕ್ಷಿತ ಮಟ್ಟದಲ್ಲಿ ಎಲ್ಲರ ಅಭಿವೃದ್ಧಿಯಾಗಬೇಕು ಎಂದು ತಿಳಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಚಾಮರಾಜನಗರ ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಗಾಳಿಯಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿವೆ. ಈ ಸಂಬಂಧ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಮನೆ ಹಾನಿಯಾಗಿರುವ ಬಗ್ಗೆ ವರದಿ ಸಂಗ್ರಹಿಸಬೇಕು. ಹಾನಿಯಾದ ಮನೆಗಳಿಗೆ ಶೀಘ್ರ ಪರಿಹಾರ ನೀಡಿ, ಸೂರು ಕಲ್ಪಿಸುವ ಕೆಲಸವಾಗಬೇಕು ಎಂದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ 24*7 ಕುಡಿಯುವ ನೀರಿನ ಯೋಜನೆಗಳನ್ನು ಅದಷ್ಟು ಬೇಗನೆ ಪೂರ್ಣಗೊಳಿಸಬೇಕು. ಜಿಲ್ಲಾಧಿಕಾರಿಗಳು ಈ ಬಗ್ಗೆ ಖುದ್ದು ಪರಿಶೀಲಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು. ಬಿ.ಆರ್.ಟಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‍ಲೈನ್ ಅಳವಡಿಕೆ ಕಾಮಗಾರಿಯಲ್ಲಿ ಅರಣ್ಯ ನೀತಿಯಿಂದ ಆಗುತ್ತಿರುವ ತೊಡಕುಗಳನ್ನು ಅಧಿಕಾರಿಗಳು ನಿವಾರಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಕುಡಿಯುವ ನೀರು ಪೂರೈಕೆ ಸಂಬಂಧ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಲು ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ನೀರು ಶುದ್ಧಿಕರಣ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಸಮರ್ಪಕ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಕಾಡಾ ಅಧ್ಯಕ್ಷರಾದ ಮರಿಸ್ವಾಮಿ, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ, ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular