ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿ ಯಾವುದೇ ಗೊಂದಲ ಇಲ್ಲ. ಬಿಪಿಎಲ್ ಕಾರ್ಡ್ ಇಲ್ಲದ ಮಹಿಳೆಯರಿಗೂ ಯೋಜನೆ ವಿಸ್ತರಣೆಗೆ ಚಿಂತನೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಸಿಎಂ ಸಿದ್ಧರಾಮಯ್ಯ ಜೊತೆಗಿನ ಸಭೆ ನಂತರ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಗೆ ಆನ್ ಲೈನ್ ಮತ್ತು ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿಯಲ್ಲಿ ನಮೂದಿಸಿರುವ ಕಾಲಂ ವಿಚಾರ ಸಿಎಂ ಗಮನಕ್ಕೆ ತಂದಿದ್ದೇವೆ. BPL ಕಾರ್ಡ್ ಇಲ್ಲದ ಮಹಿಳೆಯರಿಗೂ ಯೋಜನೆ ವಿಸ್ತರಣೆಗೆ ಚಿಂತನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.ಹಲವರು ಈಗ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಅಧಿಕಾರಿಗಳು ಸುಖಾಸುಮ್ಮನೆ ಅರ್ಜಿ ತಿರಸ್ಕರಿಸುವಂತಿಲ್ಲ, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.