ಮಡಿಕೇರಿ : ನಗರದ ಗಾಂಧಿ ಮಂಟಪದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ‘ಗಾಂಧೀಜಿಯವರ ಸ್ಮಾರಕ ಉದ್ಯಾನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ವೀಕ್ಷಿಸಿದರು. ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು. ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರಕಾರದಿಂದ 50 ಲಕ್ಷ ರೂ. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್.ಭೋಸರಾಜು ಈ ಸಂದರ್ಭದಲ್ಲಿ ಪ್ರಕಟಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಕೂಡಲೇ ಕೆಲಸ ಆಗಬೇಕು.
ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಶಾಸಕರ ಅನುದಾನದಲ್ಲಿ ಸಾಧ್ಯವಾದಷ್ಟು 10 ಲಕ್ಷ ರೂ.ವರೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸರಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಡಾ.ಮಂಥರಗೌಡ ಹೇಳಿದರು. ಸರ್ವೋದಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸರಕಾರ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ ನೀಡುವುದರ ಜತೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ರಾಜಘಾಟ್ ಮಾದರಿಯಲ್ಲಿ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಿಸಬೇಕು. ಆ ನಿಟ್ಟಿನಲ್ಲಿ ಆಕರ್ಷಕ ಕೇಂದ್ರವಾಗಿ ‘ಗಾಂಧಿ ಸ್ಮಾರಕ ಉದ್ಯಾನ’ವನ್ನು ಮಾದರಿಯಾಗಿ ನಿರ್ಮಿಸಬೇಕು ಎನ್ನುತ್ತಾರೆ ಟಿ. ಪಿ.ರಮೇಶ್ ಕೋರಿದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಅವರು ಮಹಾತ್ಮಗಾಂಧಿ ಸ್ಮಾರಕ ಉದ್ಯಾನಕ್ಕೆ ಸಂಬಂಧಿಸಿದಂತೆ ನೀಲ ನಕ್ಷೆ ಕುರಿತು ಮಾಹಿತಿ ನೀಡಿದರು. ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ಸದಸ್ಯ ಮುನೀರ್ ಅಹಮದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಮುಖಂಡ ಕಾರ್ಯಪ್ಪ ಇತರರು ಇದ್ದರು.