ಬೆಂಗಳೂರು/ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಆರಂಭವಾಗುತ್ತಿದ್ದಂತೆಯೇ, ಈ ಬಾರಿ ದಸರಾ ಅಂಗವಾಗಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳ ಆಯೋಜನೆ ಕುರಿತು ಪರ-ವಿರೋಧದ ಚರ್ಚೆಗಳು ಜೋರಾಗಿವೆ.
ಅದರಂತೆ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಮೈಸೂರು ರಾಜಮನೆತನದ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಕಂಬಳ ಆಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಮೈಸೂರು ದಸರಾ ಸಿದ್ಧತೆ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಆಗಸ್ಟ್ 26ರಂದು ಗಜಪಯಣ ಆರಂಭವಾಗಲಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇನ್ನೂ ವಿಜಯದಶಮಿಯಾದ ಅಕ್ಟೋಬರ್ 21ರಂದು ಮಧ್ಯಾಹ್ನ 4:10ಕ್ಕೆ ಮೀನಾ ಲಗ್ನದಲ್ಲಿ ಜಂಬೂಸವಾರಿ ನಡೆಯಲಿದೆ ಎನ್ನಲಾಗಿದೆ.
ಇದೇ ವೇಳೆ ಸಭೆಯಲ್ಲಿ ಕಂಬಳ ಆಯೋಜನೆ ವಿಚಾರವೂ ಪ್ರಸ್ತಾಪವಾಗಿದ್ದು, ಈ ಕುರಿತು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಮುಂದಿನ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪರಿಗಣಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.



