ಮದ್ದೂರು; ತಾಲೂಕು ಕ್ರೀಡಾಂಗಣದಲ್ಲಿ ಫೆಬ್ರವರಿ 11 ರಂದು ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ತಾಲೂಕಿನಾದ್ಯಂತ 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಹಾಗೂ ಸಾರ್ವಜನಿಕರು ಸೇರಲಿದ್ದಾರೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಸಮಾವೇಶ ನಡೆಯುವ ಪಟ್ಟಣದ ತಾಲೂಕು ಕ್ರೀಡಾಂಗಣವನ್ನು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಆಗಮಿಸಿ ಪರಿಶೀಲಿಸಿದ ನಂತರ ಮಾತನಾಡಿದರು.
ಸಮಾವೇಶದಲ್ಲಿ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಇತರೆ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಫಲಾನುಭವಿಗಳಿಗೆ, ಜನಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಪ್ರತ್ಯೇಕವಾಗಿ ಆಸನಗಳ ವ್ಯವಸ್ಥೆ ಮಾಡಿದ್ದು, ಇವರಿಗೆ ಕುಡಿಯುವ ನೀರು, ಮಜ್ಜಿಗೆಯನ್ನು ಕುಳಿತ ಸ್ಥಳಕ್ಕೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳಿಗೆ ಗ್ರಾಮಾಂತರ ಪ್ರದೇಶದಿಂದ ಆಗಮಿಸಲು ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, ಸಮಾವೇಶ ಮುಗಿದ ನಂತರ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರಕಾರವಾಗಿದೆ. ಚುನಾವಣಾ ಪೂರ್ವದಲ್ಲಿನೀಡಿದ 5 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ಸರ್ಕಾರ ವಾಗಿದೆ. ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಕಾರಣ ರಾಜ್ಯದ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗಿದೆ. ಇದರಿಂದ ಜನರು ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
- ಕೆ.ಎಂ.ಉದಯ್, ಶಾಸಕ
ಕ್ರೀಡಾಂಗಣದಲ್ಲಿ ನಡೆಯುವ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಸ್ ಗಳ ಮೂಲಕ ಆಗಮಿಸುವುದರಿಂದ ಪಟ್ಟಣದ ಪೇಟೆಬೀದಿಯಲ್ಲಿ ಸಂಚಾರಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಏಕ ಮುಖ ಸಂಚಾರ ಕೈಗೊಂಡು ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದರು.
ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಮಾವೇಶ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಸಮಾವೇಶ ಯಶಸ್ವಿಯಾಗಿ ನಡೆಯಲು ಸಹಕರಿಸಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಸೋಮಶೇಖರ್, ತಾಪಂ ಇಓ ಎಲ್.ಸಂದೀಪ್, ಟಿಎಚ್ಓ ರವೀಂದ್ರ ಬಿ.ಗೌಡ, ಬಿಇಒ ಸಿ.ಎಚ್.ಕಾಳಿರಯ್ಯ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಸಿಪಿಐ ಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಸದಸ್ಯ ಮನೋಜ್ ಕುಮಾರ್, ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ ಇದ್ದರು.